ಬೆಂಗಳೂರು : ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣ ಕುರಿತಂತೆ ವಿಚಾರಣಾ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುತ್ತಿದ್ದು, ಇದು ಅಪರಾಧ ದಂಡ ಪ್ರಕ್ರಿಯಾ ಸಂಹಿತೆ 1973ರ (ಸಿಆರ್‌ಪಿಸಿ) ಕಲಂ 173ಕ್ಕೆ ತದ್ವಿರುದ್ಧವಾಗಿದೆ ಎಂದು ಪ್ರಕರಣದ ಪ್ರಮುಖ ಆರೋಪಿ ಆಗಿರುವ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಪರ ವಕೀಲರು ಹೈಕೋರ್ಟ್ಗೆ ಮಾಹಿತಿ ನೀಡಿದರು. ನ್ಯಾಯಾಂಗ ಬಂಧನದಲ್ಲಿರುವ ಅಮೃತ್ ಪೌಲ್ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಂ. ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ವಕೀಲರು ಮನವಿ ಮಾಡಿದರು.
ವಿಚಾರಣೆ ವೇಳೆ ಅಮೃತ್ ಪೌಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ.ಎಸ್. ಶ್ಯಾಮಸುಂದರ್, ಅರ್ಜಿದಾರರು ಕಳೆದ ಒಂದು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮತ್ತು ವಿಚಾರಣಾ ನ್ಯಾಯಾಲಯವು ಅವರ ವಿರುದ್ಧದ ಯಾವುದೇ ಅಪರಾಧಗಳನ್ನು ಸಂಜ್ಞೇಯ ಎಂದು ಪರಿಗಣಿಸದೇ ಇರುವ ಕಾರಣ ಅವರ ಬಂಧನ ಕಾನೂನು ಬಾಹಿರವಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೇ, ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುವ ಪ್ರಕ್ರಿಯೆ ಸಿಆರ್‌ಪಿಸಿ ಕಲಂ 173ರ ಅಡಿ ಆರೋಪಿಗಳ ಹಕ್ಕುಗಳಿಗೆ ವಿರುದ್ಧವಾಗಿದೆ. ಈ ಅಭ್ಯಾಸ ನಿಲ್ಲಿಸಬೇಕು ಎಂದು ನ್ಯಾಯಪೀಠಕ್ಕೆ ವಿವರಿಸಿದರು.