ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ 35ನೇ ಆರೋಪಿಯಾದ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶಿಸಿದೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಅಮೃತ್ ಪೌಲ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಪಿ ಎಂ ನವಾಜ್ ಅವರಿದ್ದ ಪೀಠ ಈ ಆದೇಶ ನೀಡಿದೆ.
ಅರ್ಜಿದಾರರು ಜಾಮೀನು ಸಿಕ್ಕ ಬಳಿಕ ತನಿಖೆಗೆ ಸಹಕರಿಸಬೇಕು. ಸಾಕ್ಷ್ಯಗಳ ನಾಶಕ್ಕೆ ಮುಂದಾಗಬಾರದು. ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರಬಾರದು. ಹೊರ ದೇಶಕ್ಕೆ ಪ್ರಯಾಣ ಮಾಡಬಾರದು. ಐದು ಲಕ್ಷ ರೂ.ಗಳ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ನೀಡಬೇಕು ಎಂದು ನ್ಯಾಯಪೀಠ ಷರತ್ತುಗಳನ್ನು ವಿಧಿಸಿದೆ. ವಿವರವಾದ ಆದೇಶ ಇನ್ನಷ್ಟೇ ಲಭ್ಯವಾಗಬೇಕಿದೆ.
ಈ ಹಿಂದೆ ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರಾಗಿದ್ದ ಪ್ರಸನ್ನ ಕುಮಾರ್ ವಾದ ಮಂಡಿಸಿ, ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಉತ್ತರ ಪತ್ರಿಕೆಗಳನ್ನು ತಿದ್ದಲು ಕಾರಣರಾಗಿದ್ದರು. ಅಲ್ಲದೆ, ಹಗರಣ ನಡೆದ ವೇಳೆ ಅಮೃತ್ ಪೌಲ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು. ಆ ಸಮಯದಲ್ಲಿ ಅವರು ಸುಳ್ಳು ದಾಖಲೆಗಳ ಮೂಲಕ ಕಚೇರಿಗೆ ವೈದ್ಯಕೀಯ ರಜೆ ಹಾಕುವ ಮೂಲಕ ಹಗರಣ ನಡೆಯಲು ಕಾರಣವಾಗಿದ್ದರು.
ಉತ್ತರ ಪತ್ರಿಕೆಗಳನ್ನು ತಿದ್ದಿದ 2021ರ ಅಕ್ಟೋಬರ್ 7, 8 ಮತ್ತು 16ರಂದು ಆರೋಪಿಯು ವೈದ್ಯಕೀಯ ರಜೆಯಲ್ಲಿ ಇದ್ದುದಾಗಿ ಹೇಳಿ ಪ್ರಮಾಣಪತ್ರ ನೀಡಿದ್ದಾರೆ. ಆದರೆ, ಅವರು ಆ ದಿನಗಳಂದು ತಮ್ಮ ಪ್ರಮಾಣ ಪತ್ರದಲ್ಲಿ ಹೇಳಿರುವ ಯಲಹಂಕ ನ್ಯೂ ಟೌನ್‌ನಲ್ಲಿರುವ ನವಚೇತನ ಆಸ್ಪತ್ರೆಯಲ್ಲಿ ಯಾವುದೇ ಚಿಕಿತ್ಸೆ ಪಡೆದೇ ಇಲ್ಲ. ಆಸ್ಪತ್ರೆಯ ದಾಖಲೆಗಳನ್ನು ಪರಿಶೀಲನೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಅಂತೆಯೇ, ಆ ದಿನಗಳಲ್ಲಿ ಸ್ಟ್ರಾಂಗ್ ರೂಮ್ ಬೀಗಗಳನ್ನು ತಮ್ಮ ವೈಯಕ್ತಿಕ ಕೊಠಡಿಯಲ್ಲಿರಿಸಿದ್ದರು. ಅಲ್ಲಿಂದ ಬೇರೆಯವರಿಗೆ ಹಸ್ತಾಂತರ ಮಾಡಿದ್ದಾರೆ ಎಂದು ವಾದ ಮಂಡಿಸಿದರು.
ಅರ್ಜಿದಾರರ ಪರ ಹಿರಿಯ ವಕೀಲ ಎಂ ಎಸ್ ಶ್ಯಾಮಸುಂದರ್, ಪ್ರಕರಣ ಕುರಿತಂತೆ ವಿಚಾರಣಾ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುತ್ತಿದ್ದು, ಇದು ಅಪರಾಧ ದಂಡ ಪ್ರಕ್ರಿಯಾ ಸಂಹಿತೆ 1973ರ (ಸಿಆರ್ಪಿಸಿ) ಕಲಂ 173ಕ್ಕೆ ತದ್ವಿರುದ್ಧವಾಗಿದೆ. ಅರ್ಜಿದಾರರು ಕಳೆದ ಒಂದು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು ವಿಚಾರಣಾ ನ್ಯಾಯಾಲಯವು ಅವರ ವಿರುದ್ಧದ ಯಾವುದೇ ಅಪರಾಧಗಳನ್ನು ಸಂಜ್ಞೆಯ ಎಂದು ಪರಿಗಣಿಸದೇ ಇರುವ ಕಾರಣ ಅವರ ಬಂಧನ ಕಾನೂನು ಬಾಹಿರವಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುವ ಪ್ರಕ್ರಿಯೆ ಸಿಆರ್‌ಪಿಸಿ ಕಲಂ 173ರ ಅಡಿಯಲ್ಲಿ ಆರೋಪಿಗಳ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ವಿವರಿಸಿದ್ದರು.
ಪ್ರಕರಣದ ಹಿನ್ನೆಲೆ: ರಾಜ್ಯ ಪೊಲೀಸ್ ನೇಮಕಾತಿ ಮಂಡಳಿಯ ನಿರ್ದೇಶಕರಾಗಿದ್ದ ಅಮೃತ್ ಪೌಲ್ ಅವರ ಸೂಚನೆ ಮೇರೆಗೆ 545 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿಯಲ್ಲಿ ಹಗರಣ ನಡೆದಿದೆ ಎಂಬ ಆರೋಪವಿದೆ. ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಅಮೃತ್ ಪೌಲ್ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನದಲ್ಲಿದ್ದರು. ಬಳಿಕ ಅವರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನೂ ಓದಿ :PSI Scam: ಆರೋಪಿ ಅಮೃತ್ ಪೌಲ್ ಜಾಮೀನು ಅರ್ಜಿ.. ಆದೇಶ ಕಾಯ್ದಿರಿಸಿದ ಹೈಕೋರ್ಟ್