ಬೆಂಗಳೂರು: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗಿಯಾದ ಬಳಿಕ ಅವರು ಮಾತನಾಡಿದರು.
ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಟ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ದಲಿತರ ವಿರುದ್ಧದ ಅಪರಾಧಗಳಿಗೆ ಶಿಕ್ಷೆ ಪ್ರಮಾಣ ಕಡಿಮೆ ಇತ್ತು, ಈಗ ಸ್ವಲ್ಪ ಹೆಚ್ಚಿದೆ. ಆದರೆ ಆ ವಿಚಾರದಲ್ಲಿ ರಾಷ್ಟ್ರದ ಸರಾಸರಿಗಿಂತ ರಾಜ್ಯದಲ್ಲಿ ಹೆಚ್ಚಾಗಬೇಕು ಎಂದು ಸೂಚಿಸಿದ್ದೇನೆ.
ಕೆಲವೊಮ್ಮೆ ದೋಷಾರೋಪಣೆ ಪಟ್ಟಿ ಸಲ್ಲಿಕೆ ವಿಳಂಬವಾಗುವುದೂ ಸಹ ಶಿಕ್ಷೆಯ ಪ್ರಮಾಣ ಕಡಿಮೆಯಾಗಲು ಕಾರಣವಾಗುತ್ತದೆ. ಆದ್ದರಿಂದ 60 ದಿನದೊಳಗೆ ಪೊಲೀಸರು ದೋಷಾರೋಪಣೆ ಒಟ್ಟಿ ಸಲ್ಲಿಸಬೇಕು. ಅಗತ್ಯ ಇದ್ದಲ್ಲಿ ಕಾನೂನು ಸೌಲಭ್ಯಗಳನ್ನ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು. ಅಲ್ಲದೇ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ. ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇಲ್ಲದಿದ್ದರೆ ಡಿಸಿಪಿ ಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ವರಿಸಿದರು.