ಬೆಂಗಳೂರು:ನೆರೆ ಸಂತ್ರಸ್ತರಿಗೆ ಪರಿಹಾರದ ಮೊತ್ತ ತಲುಪಿಸುವಲ್ಲಿ ಮಧ್ಯವರ್ತಿಗಳ ಹಾವಳಿ ಹಾಗೂ ಭ್ರಷ್ಟಾಚಾರ ತಡೆಗಟ್ಟಲು ರಾಜ್ಯಮಟ್ಟದಲ್ಲಿ ವಿಶೇಷ ಸ್ಕ್ವಾಡ್ ರಚನೆ ಮಾಡಲು ಕಂದಾಯ ಇಲಾಖೆ ಕಾರ್ಯದರ್ಶಿಗೆ ಕಂದಾಯ ಸಚಿವ ಆರ್.ಅಶೋಕ್ ಆದೇಶ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ವಿಧಾನಸೌಧದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಜೊತೆಗೆ ಸಚಿವ ಆರ್. ಅಶೋಕ್ ಸಭೆ ನಡೆಸಿದರು. ಕಂದಾಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಜ್ ಕುಮಾರ್ ಕತ್ರಿ, ಅತೀಕ್, ಅನಿಲ್ ಕುಮಾರ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದು, ರಾಜ್ಯದ ಹಲವೆಡೆ ತೀವ್ರ ಮಳೆ ಹಾಗೂ ಪ್ರವಾಹದಿಂದ ಉಂಟಾಗಿರುವ ಹಾನಿಯ ಬಗ್ಗೆ ಜಿಲ್ಲಾವಾರು ಮಾಹಿತಿ ನೀಡಿದರು. ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಯಾದ ಬಗ್ಗೆ ಚರ್ಚೆ ನಡೆಸಿ, ಅಧಿಕಾರಿಗಳಿಂದ ಸಮಗ್ರವಾಗಿ ಮಾಹಿತಿ ಕಲೆಹಾಕಿದ್ದಾರೆ.
ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಆರ್.ಅಶೋಕ್, ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಹ ಬಂದಿದ್ದು, 5 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇದೆ. ಪ್ರವಾಹ ಪರಿಸ್ಥಿತಿಯಿಂದ 32,000ಕೋಟಿ ರೂ.ಗೂ ಹೆಚ್ಚು ಹಾನಿಯಾಗಿದೆ. ಹಾಗಾಗಿಯೇ ಕೇಂದ್ರಕ್ಕೆ ವಿಸ್ತೃತ ವರದಿ ಸಲ್ಲಿಸಲು ಸಿದ್ದತೆ ನಡೆಸಿದ್ದೇವೆ ಎಂದರು.
ನೆರೆ ಸಂತ್ರಸ್ತರಿಗೆ ಪರಿಹಾರದ ಮೊತ್ತ ತಲುಪಿಸುವಲ್ಲಿ ಮಧ್ಯವರ್ತಿಗಳ ಹಾವಳಿ ಹಾಗೂ ಭ್ರಷ್ಟಾಚಾರ ತಡೆಗಟ್ಟಲು ರಾಜ್ಯಮಟ್ಟದಲ್ಲಿ ವಿಶೇಷ ಸ್ಕ್ವಾಡ್ ರಚನೆ ಮಾಡಲು ಕಾರ್ಯದರ್ಶಿಯವರಿಗೆ ಆದೇಶಿಸಿದ್ದೇನೆ. ಅಲ್ಲದೆ ಸಂತ್ರಸ್ತರಿಗೆ ಪರಿಹಾರದ ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು. ನಗದು ಮತ್ತು ಚೆಕ್ ರೂಪದ ವಿತರಣೆ ಇಲ್ಲ. ಇದರಲ್ಲೂ ಯಾರಾದರೂ ಭ್ರಷ್ಟಾಚಾರ ಮಾಡುತ್ತಿರುವುದು ಕಂಡು ಬಂದರೆ ಅಂತಹ ಅಧಿಕಾರಿಗಳ ಮೇಲೆ ಉಗ್ರ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.