ಬೆಂಗಳೂರು: ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ನಿನ್ನೆ(ಡಿ.14) ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯಗೆ ದೂರವಾಣಿ ಮೂಲಕ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಶೀಘ್ರವಾಗಿ ಗುಣಮುಖರಾಗುವಂತೆ ಅವರು ಹಾರೈಸಿದರು.
ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಗಣ್ಯರ ಭೇಟಿ: ಸಿ.ಎಂ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್, ಸಚಿವರಾದ ಈಶ್ವರಪ್ಪ, ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಪಕ್ಷದ ನಾಯಕರಾದ ಡಾ.ಜಿ.ಪರಮೇಶ್ವರ್, ಜಮೀರ್ ಅಹಮದ್, ದೇಶಪಾಂಡೆ, ಧ್ರುವನಾರಾಯಣ, ರಿಜ್ವಾನ್ ಅರ್ಷದ್, ಕೆ.ಬಿ. ಕೋಳಿವಾಡ, ಮಾಜಿ ಸಂಸದ ಡಾ ಎಂ ವೀರಪ್ಪ ಮೊಯ್ಲಿ ಸೇರಿದಂತೆ ಮಾಜಿ ಸಚಿವ ಹೆಚ್.ವಿಶ್ವನಾಥ್ ಹಾಗೂ ಅನೇಕ ರಾಜಕೀಯ ಗಣ್ಯತರು ಭೇಟಿಯಾಗಿದ್ದಾರೆ.
ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಹಲವು ಮುಖಂಡರು ಹಾಗೂ ಧಾರ್ಮಿಕ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ದೂರವಾಣಿ ಕರೆ:ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾರ್ಯದರ್ಶಿ ಅಹಮದ್ ಪಟೇಲ್, ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಕೂಡಾ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಡಿ.11 ರಂದು ಬೆಳಗ್ಗೆ ನಿಯಮಿತ ಆರೋಗ್ಯ ತಪಾಸಣೆಗೆ ಒಳಗಾಗಿದ್ದ ಸಿದ್ದರಾಮಯ್ಯ, ಮಧ್ಯಾಹ್ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಅವರು ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸೆಗೆ ಒಳಗಾಗಿದ್ದಾರೆ. ಇಂದು (ಡಿ.15) ಸಂಜೆ ಸಿದ್ದರಾಮಯ್ಯ ಅವರು ಆಸ್ಪತ್ರೆಯಿಂದ ಮನೆಗೆ ಶಿಫ್ಟ್ ಆಗಲಿದ್ದಾರೆ.