ಬೆಂಗಳೂರು : ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಇಂದು ಮುಂದುವರೆದಿದ್ದರೆ, ಮತ್ತೆ ಕೆಲವು ಜಿಲ್ಲೆಗಳಲ್ಲಿ ಮಳೆ ತೀವ್ರತೆ ಕಡಿಮೆಯಾಗಿದೆ. ಮುಂದಿನ ವಾರದಲ್ಲಿ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಆಗಲಿದ್ದು, ಮುಂದಿನ ಒಂದು ವಾರದಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಪ್ರವಾಸಿಗರು ಜಿಲ್ಲೆಯ ತಾಣಗಳಿಗೆ ಭೇಟಿ ನೀಡುವುದನ್ನು ಮುಂದೂಡಬೇಕು. ಈ ರಸ್ತೆಯಲ್ಲಿ ಈಗಾಗಲೆ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಅನೇಕ ಕಡೆ ಭೂ ಕುಸಿತವಾಗಿದ್ದು, ತೆರವು ಕಾರ್ಯಾಚರಣೆ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮನವಿ ಮಾಡಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಇಂದು ತಗ್ಗಿದೆ. ಈ ಜಿಲ್ಲೆಯಲ್ಲಿ ಒಂದು ವಾರದ ಅವಧಿಯಲ್ಲಿ 358 ಮನೆಗಳು ಕುಸಿದಿವೆ. ಭತ್ತ ನಾಟಿ ಮಾಡುತ್ತಿದ್ದು, ಇನ್ನೊಂದೆಡೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿದೆ.
ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದ್ದು, 30 ಗೇಟುಗಳ ಮೂಲಕ 1,66,900 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಹಾವೇರಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದ ಇದುವರೆಗೆ 650 ಮನೆಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ಧರ್ಮಾನದಿಯ ಹರಿವು ಹೆಚ್ಚಾಗಿ ಜಮೀನುಗಳಿಗೆ ನೀರು ನುಗ್ಗಿದೆ. ಬೆಳೆಹಾನಿ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಮನೆ, ಬೆಳೆ ಹಾನಿಗೆ ಸರ್ಕಾರದ ಮಾರ್ಗಸೂಚಿ ಅನ್ವಯ ಪರಿಹಾರ ನೀಡಲಾಗುವುದು. ಶಿಥಿಲಗೊಂಡ ಮನೆಗಳಲ್ಲಿ ವಾಸಿಸುವವರನ್ನು ಪತ್ತೆ ಹಚ್ಚಿ ಅವರನ್ನು ಕಾಳಜಿ ಕೇಂದ್ರಕ್ಕೆ ಕಳುಹಿಸುವಂತೆ ಸೂಚನೆ ನೀಡಲಾಗಿದೆ. ನದಿಪಾತ್ರದ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ಅತಿವೃಷ್ಟಿಯಿಂದ ತೊಂದರೆಯಾದರೆ ಕಾಳಜಿ ಕೇಂದ್ರದಲ್ಲಿ ವಸತಿ - ಊಟದ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ತುಂಗಭದ್ರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 1 ಸಾವಿರದ 633 ಅಡಿ ಇದ್ದು, ಇಂದಿನ ಮಟ್ಟ 1 ಸಾವಿರದ 620 ಕ್ಕೆ ತಲುಪಿದೆ. ಸದ್ಯ ಜಲಾಶಯದಲ್ಲಿ 59 ಟಿಎಂಸಿ ನೀರು ಸಂಗ್ರಹವಾಗಿದೆ. ಕಾಲುವೆಗಳಿಗೆ ನೀರು ಹರಿದು ಬಿಟ್ಟಿರುವುದರಿಂದ ಜಿಲ್ಲೆಯಲ್ಲಿ ಮುಂದಿನ ಕೆಲ ದಿನಗಳಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಳ್ಳಲಿವೆ. ಒಟ್ಟಿನಲ್ಲಿ ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಓದಿ:ದಡದಲ್ಲಿ ಸತ್ತು ಬಿದ್ದ ಬೃಹತ್ 24 ಅಡಿ ಉದ್ದದ ನೀಲಿ ತಿಮಿಂಗಿಲ.. ಪ್ರವಾಹಕ್ಕೆ ಕೊಚ್ಚಿ ಹೋದ ಕುರಿಗಳು!