ಬೆಂಗಳೂರು:ಈಗಾಗಲೇ ಮುಂಗಾರು ಮಳೆ ವಿಳಂಬವಾಗಿದ್ದು, ರಾಜ್ಯದ ರೈತರನ್ನು ಚಿಂತೆಗೀಡು ಮಾಡಿದೆ. ಹೊಲಗಳನ್ನು ಬಿತ್ತನೆಗೆ ಅಣಿಗೊಳಿಸಿರುವ ಅನ್ನದಾತರು ಬೀಜ, ಗೊಬ್ಬರ ಖರೀದಿಸಿ ಆಕಾಶದತ್ತ ಮುಖ ಮಾಡಿ ಮಳೆರಾಯನ ಆಗಮನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಇದೀಗ ರಾಜ್ಯ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಮುಂದಿನ 48 ಗಂಟೆಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ. ಮೀ. ತಲುಪುವ ಸಾಧ್ಯತೆ ಇದೆ ಎಂದು ಹೇಳಿದೆ. ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4 ರಿಂದ 5 ಡಿಗ್ರಿ ಸೆಲ್ಸಿಯಸ್ ಹಾಗೂ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3 ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ:ಗ್ಯಾರಂಟಿಗಳಲ್ಲಿ ಕೆಲವು ನ್ಯೂನತೆಗಳಿವೆ, ಚರ್ಚಿಸಿ ಜಾರಿ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ:ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿಲೋ ಮೀಟರ್ ನಿಂದ 60 ಕಿ. ಮೀ. ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.