ಬೆಂಗಳೂರು:ರಾಜಕಾಲುವೆ ಒತ್ತುವರಿ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿ ವಿವರಣೆ ನೀಡುವಂತೆ ನಿರ್ದೇಶನ ನೀಡಿದೆ.
ರಾಜಕಾಲುವೆ ಒತ್ತುವರಿ ತೆರವು: ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರಿನ ರಾಜಕಾಲುವೆ ಒತ್ತುವರಿ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಲ್ಚರಲ್ ಆ್ಯಂಡ್ ಸೋಸಿಯಲ್ ಸರ್ವೀಸ್ ಆರ್ಗನೈಝೇಶನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯು ಮುಖ್ಯ ನ್ಯಾಯ ಮೂರ್ತಿಗಳಿದ್ದ ವಿಭಾಗೀಯ ನ್ಯಾಯ ಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಬೆಂಗಳೂರು ಉತ್ತರ ತಾಲೂಕಿನ ನಾಗವಾರ ಗ್ರಾಮದಲ್ಲಿರುವ ರಾಜ ಕಾಲುವೆಯನ್ನು ಒತ್ತುವರಿ ಮಾಡಿ ಗೋಡೆ ನಿರ್ಮಾಣ ಮಾಡಿದ್ದಾರೆ. ರಾಜ ಕಾಲುವೆ ಒತ್ತುವರಿ ಮಾಡಿದವರ ವಿರುದ್ಧ ತನಿಖೆ ನಡೆಸಿ ಕ್ರಿಮಿನಲ್ ಪ್ರಕರಣ ದಾಖಲಿಸಲು ನಿರ್ದೇಶಿಸಬೇಕು ಎಂದು ನ್ಯಾಯ ಪೀಠಕ್ಕೆ ಮನವಿ ಮಾಡಿದರು.
ವಕೀಲರ ವಾದ ಆಲಿಸಿದ ನ್ಯಾಯ ಪೀಠವು ರಾಜ ಕಾಲುವೆ ಒತ್ತುವರಿ ವಿಚಾರದ ಕುರಿತು ಹಾಗೂ ನಗರದಲ್ಲಿರುವ ಕೆರೆಗಳ ಸಂರಕ್ಷಣೆ ಕುರಿತು ವಿವರಣೆ ನೀಡಿ ಎಂದು ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.