ಬೆಂಗಳೂರು:ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಸಾಥ್ ನೀಡಿದೆ. ಈ ಪ್ರಯುಕ್ತ ಕಾಂಗ್ರೆಸ್ ಬೆಂಗಳೂರಿನಲ್ಲಿ ರಾಜಭವನ ಚಲೋ ಹಮ್ಮಿಕೊಂಡಿದೆ.
ಬಿಜೆಪಿ ವಿರುದ್ಧ ಹರಿಹಾಯ್ದ ಕಾಂಗ್ರೆಸ್ ನಾಯಕರು ಜಾಥಾದಲ್ಲಿ ಭಾಗಿಯಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರ‍್ಯಾಲಿಯಲ್ಲಿ ಭಾಗಿಯಾಗಲು ಬರುತ್ತಿರುವ ರೈತರನ್ನು ತಡೆಯಲಾಗಿದೆ. ಹಲವೆಡೆ ನಮ್ಮ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತೆ ಎಂದರು.
ಮಾಜಿ ಸಚಿವ ಯು.ಟಿ.ಖಾದರ್ ಮಾತನಾಡುತ್ತಾ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ಕೇವಲ ರೈತರಿಗೆ ಮಾತ್ರ ಮಾರಕವಲ್ಲ. ದೇಶದ 130 ಕೋಟಿ ಜನರಿಗೂ ಮಾರಕವಾಗಿವೆ. ನಾವು ಇಡೀ ದೇಶದ ಜನತೆಯ ದನಿಯಾಗಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಗಳನ್ನು ವಿರೋಧಿಸುತ್ತೇವೆ ಎಂದರು.
ಬಿಜೆಪಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಬದಲು ಜನರಿಗೆ ತೊಂದರೆಯಾಗುವ ಕಾನೂನುಗಳನ್ನೇ ಜಾರಿಗೆ ತರುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಈಶ್ವರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ ಭದ್ರವಾಗಿಲ್ಲ, ಅವರನ್ನ ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಅವರ ಪಕ್ಷದವರೇ ಪಿತೂರಿ ನಡೆಸುತ್ತಿದ್ದಾರೆ. ಈ ಮಧ್ಯೆ ರಾಜ್ಯದ ಅಭಿವೃದ್ಧಿ ನಡೆಸಲು ಹೇಗೆ ಸಾಧ್ಯ ಎಂದು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಪ್ರಶ್ನಿಸಿದ್ದಾರೆ.