ಬೆಂಗಳೂರು: ನಾಳೆ ರಾಜ್ಯಸಭೆ ಚುನಾವಣೆ ನಡೆಯಲಿದೆ. ವಿಧಾನಸೌಧದ ಮೊದಲ ಮಹಡಿಯಲ್ಲಿನ ಚುನಾವಣಾ ಕೊಠಡಿಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಿಜೆಪಿಯ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್, ಲೆಹರ್ ಸಿಂಗ್ ಹಾಗೂ ಕಾಂಗ್ರೆಸ್ನ ಜೈರಾಂ ರಮೇಶ್, ಮನ್ಸೂರ್ ಅಲಿ ಖಾನ್ ಮತ್ತು ಜೆಡಿಎಸ್ನಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.
ಈ ಬಾರಿ ನಾಲ್ಕನೇ ಸೀಟಿಗಾಗಿ ನಡೆಯುವ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ನಾಲ್ಕನೇ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಬಿಜೆಪಿಯ ಅಭ್ಯರ್ಥಿ ಲೆಹರ್ ಸಿಂಗ್, ಜೆಡಿಎಸ್ ಅಭ್ಯರ್ಥಿ ಕುಪ್ಪೇಂದ್ರ ರೆಡ್ಡಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ನಡುವೆ ಸ್ಪರ್ಧೆ ಏರ್ಪಟ್ಟಿದೆ.
ವಿಧಾನಸೌಧದ 106ನೇ ಕೊಠಡಿಯನ್ನು ಮತದಾನ ಕೇಂದ್ರವನ್ನಾಗಿ ಮಾಡಲಾಗಿದೆ. ಅಲ್ಲಿಯೇ ಮತ ಎಣಿಕೆ ಕಾರ್ಯವೂ ನಡೆಯಲಿದೆ. ಚುನಾವಣೆಯಲ್ಲಿ ಮತ ಚಲಾಯಿಸುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚನಾ ಫಲಕಗಳನ್ನು ಕೊಠಡಿ ಒಳಕ್ಕೂ, ಹೊರಕ್ಕೂ ಅಳವಡಿಸಲಾಗಿದೆ. ಎರಡು ವೋಟಿಂಗ್ ಕಂಪಾರ್ಟ್ ಮೆಂಟ್, ಮತಪೆಟ್ಟಿಗೆ, ಮೂರು ಪಕ್ಷಗಳ ಅಧಿಕೃತ ಏಜೆಂಟರಿಗೆ ಪ್ರತ್ಯೇಕ ಕೌಂಟರ್ಗಳನ್ನು ಸಿದ್ಧಪಡಿಸಲಾಗಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ಹಾಗು ಸಂಜೆ 5 ರಿಂದ 6 ಗಂಟೆಯವರೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ.