ಬೆಂಗಳೂರು:ರಾಸಲೀಲೆ ವಿಡಿಯೋ ಬಿಡುಗಡೆ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ರಮೇಶ್ ಜಾರಕಿಹೊಳಿ ತಮ್ಮ ಬದಲು, ತಾವು ಹೇಳುವವರಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬೇಡಿಕೆ ಇಟ್ಟಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಹೈಕಮಾಂಡ್ ಸೂಚನೆ ಇದೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂಬ ಸಂದೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಮೇಶ್ ಜಾರಕಿಹೊಳಿಗೆ ತಿಳಿಸಿದ್ದಾರೆ. ಈ ವೇಳೆ ದೂರವಾಣಿ ಮೂಲಕ ಇಬ್ಬರು ಕೆಲಕಾಲ ಮಾತುಕತೆ ನಡೆಸಿದ್ದಾರೆ ಎನ್ನಲಾಗ್ತಿದೆ. ರಾಜೀನಾಮೆ ನೀಡುತ್ತೇನೆ ಆದರೆ, ನಾನು ಹೇಳುವ ವ್ಯಕ್ತಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು ಎನ್ನುವ ಬೇಡಿಕೆ ಇರಿಸಿದ್ದಾರೆ ಎನ್ನಲಾಗಿದೆ.
ಓದಿ:ರಮೇಶ್ ಜಾರಕಿಹೊಳಿ ಭಾವಚಿತ್ರಕ್ಕೆ ಹಾಲು ಚೆಲ್ಲಿದ ಅಭಿಮಾನಿಗಳು: ವಿಡಿಯೋ
ಜಾರಕಿಹೊಳಿ ಬೇಡಿಕೆಯನ್ನು ಪರಿಶೀಲಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ತಮ್ಮ ಸಹೋದರ ಕೆಎಂಎಫ್ ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರಿಗೆ ತಮ್ಮ ಬದಲು ಸಚಿವ ಸ್ಥಾನ ನೀಡಬೇಕು ಎನ್ನುವ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಒಬ್ಬರಿಗೆ ಒಂದೇ ಹುದ್ದೆ ಎನ್ನುವ ನಿಯಮ ಅಡ್ಡಿಯಾದಲ್ಲಿ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಬೇಡಿಕೆಯನ್ನು ಇರಿಸಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಈ ಮಾಹಿತಿಯನ್ನು ಸಿಎಂ ಕಚೇರಿ ತಳ್ಳಿಹಾಕಿದೆ. ಇಂತಹ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದೆ. ಆದರೂ ಈ ಬಗ್ಗೆ ಚರ್ಚೆ ನಡೆಯದೇ ಇರಲು ಸಾಧ್ಯವಿಲ್ಲ ಎನ್ನುವ ಮಾತುಗಳು ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ.