ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ನಿರಂತರ ಭ್ರಷ್ಟಾಚಾರದಲ್ಲಿ ತೊಡಗಿದೆ. ಸಿಎಂ ಮಗ, ಅಳಿಯ ಸೇರಿದಂತೆ ಕುಟುಂಬದ ಸದಸ್ಯರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದರು.
ಯಡಿಯೂರಪ್ಪನವರಿಗೆ ಸಿಎಂ ಆಗಿ ಮುಂದುವರೆಯಲು ನೈತಿಕ ಹಕ್ಕಿಲ್ಲ: ಸುರ್ಜೇವಾಲ ವಾಗ್ದಾಳಿ - ಬೆಂಗಳೂರಿನಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಸುದ್ದಿಗೋಷ್ಠಿ
ಸಿಎಂ ಕುಟುಂಬಸ್ಥರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಹೀಗಾಗಿ ಯಡಿಯೂರಪ್ಪನವರಿಗೆ ಸಿಎಂ ಆಗಿರಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ವರ್ಗಾವಣೆ ಸೇರಿದಂತೆ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿಯೂ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಸಿಎಂ ಪುತ್ರ ವಿಜಯೇಂದ್ರ ಹಾಗೂ ಅಧಿಕಾರಿ ಶಶಿಧರ್ ಮರಾಡಿ ನಡುವಿನ ಸಂಭಾಷಣೆ ಇದಕ್ಕೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿಯಾಗಿ ಮುಂದುವರೆಯುವ ನೈತಿಕ ಹಕ್ಕು ಯಡಿಯೂರಪ್ಪನವರಿಗೆ ಒಂದು ಕ್ಷಣವೂ ಇಲ್ಲ ಎಂದರು.
ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ಸಿಎಂ ವಿಫಲರಾಗಿದ್ದಾರೆ. ಅಲ್ಲದೆ ನಡೆದಿರುವ ಹಗರಣಗಳನ್ನು ಸಮರ್ಥಿಸಿಕೊಳ್ಳುತ್ತಾ, ಅಂತಹ ಪ್ರಕರಣ ನಡೆದೇ ಇಲ್ಲ ಎಂದು ಹೇಳುತ್ತಿದ್ದಾರೆ. ಆದ್ದರಿಂದ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಸರ್ಕಾರವನ್ನು ಕಿತ್ತೊಗೆಯುವ ಕಾರ್ಯ ಮಾಡಬೇಕಾಗುತ್ತದೆ ಎಂದು ಹೇಳಿದರು.