ಬೆಂಗಳೂರು:ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಚಿತ್ತಾಪುರ ತಾಲೂಕಿನ ರೇವೂರು ಗ್ರಾಮದಲ್ಲಿ ರಥೋತ್ಸವ ನಡೆಸಿದವರ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ವರದಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಲಾಕ್ಡೌನ್ ಉಲ್ಲಂಘಿಸಿ ರಥೋತ್ಸವ: ಸರ್ಕಾರದಿಂದ ವರದಿ ಕೇಳಿದ ಹೈಕೋರ್ಟ್ - High Court hearing report
ಲಾಕ್ಡೌನ್ ನಿಯಮಗಳ ನಡುವೆ ಚಿತ್ತಾಪುರ ತಾಲೂಕಿನ ವಾಡಿ ಹೋಬಳಿಯ ರೇವೂರು ಗ್ರಾಮದಲ್ಲಿ ನಡೆದ ಗ್ರಾಮ ದೇವತೆಯ ರಥೋತ್ಸವ ಕುರಿತು ಹಾಗೂ ಈ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ವರದಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
![ಲಾಕ್ಡೌನ್ ಉಲ್ಲಂಘಿಸಿ ರಥೋತ್ಸವ: ಸರ್ಕಾರದಿಂದ ವರದಿ ಕೇಳಿದ ಹೈಕೋರ್ಟ್ Rathotsava in lockdown period: High Court hearing report from Govt](https://etvbharatimages.akamaized.net/etvbharat/prod-images/768-512-6885534-522-6885534-1587477864271.jpg)
ಪ್ರಕರಣ ಸಂಬಂಧ ಜಿಲ್ಲಾಡಳಿತ ಮತ್ತು ರಥೋತ್ಸವ ಆಯೋಜಕರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತೆ ಹಾಗೂ ವಕೀಲೆ ಗೀತಾ ಮಿಶ್ರಾ ಅವರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲಕಾಲ ವಾದ ಆಲಿಸಿದ ಪೀಠ, ಲಾಕ್ಡೌನ್ ಆದೇಶಗಳನ್ನು ಉಲ್ಲಂಘಿಸಿ ರಥೋತ್ಸವ ಆಯೋಜಿಸಲು ಅನುಮತಿ ನೀಡಿದ ಅಧಿಕಾರಿಗಳು ಹಾಗೂ ಉತ್ಸವ ಆಯೋಜಕರ ವಿರುದ್ಧ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ನಿರ್ದೇಶಿಸಿತು. ಜತೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ ಪೀಠ, ಅರ್ಜಿ ವಿಚಾರಣೆಯನ್ನು ಏ. 24ಕ್ಕೆ ಮುಂದೂಡಿದೆ.