ಬೆಂಗಳೂರು :ಪೂರ್ವ ಅರಬ್ಬೀ ಸಮುದ್ರದ ಕರ್ನಾಟಕ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತಾರ ಪ್ರದೇಶವಿದೆ. ಕಚ್ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 14ರಿಂದ 18ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೆಶಕ ಸಿ ಎಸ್ ಪಾಟೀಲ್ ಎಚ್ಚರಿಸಿದ್ದಾರೆ.
ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜುಲೈ 14, 15 ಹಾಗೂ 17ರಂದು ಆರೆಂಜ್ ಅಲರ್ಟ್ ಮತ್ತು ಜುಲೈ 16ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದಿದ್ದಾರೆ.
ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆ ನಿರೀಕ್ಷಿಸಲಾಗಿದೆ. ಜುಲೈ 18ರಂದು ಯೆಲ್ಲೋ ಅಲರ್ಟ್, ಜುಲೈ 15, 16 ಹಾಗೂ 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದರು.