ಬೆಂಗಳೂರು: ರಾಜ್ಯ ಸರ್ಕಾರದ ಐದನೇ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ 'ಯುವನಿಧಿ'ಗೆ ಇದೇ ಡಿಸೆಂಬರ್ 21ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ ಎಂದಿದ್ದಾರೆ. ಈ ಸಂಬಂಧ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.
2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಸಿಗದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಗಳು ಸೇರಿದಂತೆ) ಪ್ರತಿ ತಿಂಗಳು ರೂ.3000 ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು ಯುವ ನಿಧಿ ಯೋಜನೆ ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ.
ಯೋಜನೆಯ ಷರತ್ತು ಮತ್ತು ನಿಬಂಧನೆಗಳೇನು?:
- ಈ ಯೋಜನೆಯು ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ಅನ್ವಯವಾಗುತ್ತದೆ.
- ಈ ಸೌಲಭ್ಯ ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು.
- ಈ ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
- ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.