ಬೆಂಗಳೂರು:ರಾಜ್ಯ ಸರ್ಕಾರದ ನೇರ ನೇಮಕಾತಿಗಳಲ್ಲಿ ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಮೀಸಲು ಕಲ್ಪಿಸಿ ಆದೇಶ ಹೊರಡಿಸಿರುವ ಹಿನ್ನೆಲೆ ಈ ಕುರಿತಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.
ಇದೇ ಅರ್ಜಿಯಲ್ಲಿ ನಿಗಮ-ಮಂಡಳಿಗಳ ನೇಮಕಾತಿಯಲ್ಲೂ ಮೀಸಲು ನೀಡಬೇಕೆಂಬ ಕುರಿತಂತೆ ಮಾಡಿದ ಮನವಿಯನ್ನು ಪರಿಗಣಿಸಲು ನಿರಾಕರಿಸಿರುವ ಹೈಕೋರ್ಟ್, ಈ ಕುರಿತಂತೆ ಪ್ರತ್ಯೇಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ.
ಲೈಂಗಿಕ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸಂಗಮ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಪೀಠಕ್ಕೆ ಮನವಿ ಮಾಡಿ, ರಾಜ್ಯ ಸರ್ಕಾರದ ನೇಮಕಾತಿಗಳಲ್ಲಿ ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲು ನೀಡಲಾಗಿದೆ. ಆದರೆ, ನಿಗಮ ಮಂಡಳಿಗಳಲ್ಲಿ ಇದೇ ರೀತಿ ಮೀಸಲು ಕಲ್ಪಿಸುವ ವಿಚಾರವಾಗಿ ಸರ್ಕಾರ ಕ್ರಮ ಕೈಗೊಂಡಿಲ್ಲ. ಹೀಗಾಗಿ ಈ ಮನವಿಯನ್ನು ಪರಿಗಣಿಸಿ ಸೂಕ್ತ ಆದೇಶ ನೀಡಬೇಕು ಎಂದು ಕೋರಿದರು. ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ತೃತೀಯ ಲಿಂಗಿಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಅಗತ್ಯವಿದೆ ಎಂದರು.
ಇದನ್ನೂ ಓದಿ:ಆರ್ಟಿಇ ಸೀಟುಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ: ಪರಿಷ್ಕೃತ ವೇಳಾಪಟ್ಟಿ ಹೀಗಿದೆ..
ಸರ್ಕಾರದ ಪರ ವಕೀಲರು ವಾದಿಸಿ, ಹೈಕೋರ್ಟ್ ನಿರ್ದೇಶದಂತೆ ರಾಜ್ಯ ಸರ್ಕಾರ ಈಗಾಗಲೇ ತನ್ನ ನೇಮಕಾತಿಯಲ್ಲಿ ಶೇ. 1ರಷ್ಟು ಮೀಸಲು ಕಲ್ಪಿಸಿದೆ. ನಿಗಮ-ಮಂಡಳಿಗಳಿಗೂ ಈ ನಿಟ್ಟಿನಲ್ಲಿ ಕ್ರಮ ಜರುಗಿಸುವಂತೆ ಸುತ್ತೋಲೆ ಮೂಲಕ ತಿಳಿಸಲಾಗಿದೆ. ನಿಗಮ-ಮಂಡಳಿಗಳು ಸ್ವತಂತ್ರ ಸಂಸ್ಥೆಗಳಾಗಿದ್ದು, ಅವುಗಳಿಗೆ ಹೀಗೆ ಮಾಡಿ ಎಂದು ಆದೇಶಿಸಲು ಸಾಧ್ಯವಿಲ್ಲ. ಅರ್ಜಿದಾರರು ಈ ನಿಟ್ಟಿನಲ್ಲಿ ಪರಿಹಾರ ಬೇಕಿದ್ದರೆ ನಿಗಮ-ಮಂಡಳಿಗಳನ್ನು ಪ್ರತಿವಾದಿಗಳಾಗಿಸಬೇಕಿತ್ತು. ಆದರೆ ಮಾಡಿಲ್ಲ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅರ್ಜಿದಾರರ ಕೋರಿಕೆಯಂತೆ ಸರ್ಕಾರ ಕ್ರಮ ಕೈಗೊಂಡಿದೆ. ಹೀಗಾಗಿ ಅರ್ಜಿದಾರರ ಕೋರಿಕೆ ಈಡೇರಿದಂತಾಗಿದೆ. ಇನ್ನು ನಿಗಮ-ಮಂಡಳಿಗಳ ನೇಮಕಾತಿಯಲ್ಲಿ ಮೀಸಲು ಕೋರುವುದಾದರೆ ಅರ್ಜಿದಾರರು ಪ್ರತ್ಯೇಕ ಅರ್ಜಿ ಸಲ್ಲಿಸಿ, ಸಂಬಂಧಪಟ್ಟವರನ್ನು ಪ್ರತಿವಾದಿಯಾಗಿಸಬಹುದು ಎಂದು ಸ್ಪಷ್ಟಪಡಿಸಿ ಅರ್ಜಿ ಇತ್ಯರ್ಥಪಡಿಸಿತು.
ತೃತೀಯ ಲಿಂಗಿಗಳಿಗೆ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲು ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ-1977ರ ನಿಯಮ 9ಕ್ಕೆ ತಿದ್ದುಪಡಿ ತಂದು 1(ಡಿ)ಯನ್ನು ಸೇರ್ಪಡೆಗೊಳಿಸಿದೆ. ತಿದ್ದುಪಡಿ ನಿಯಮದಂತೆ ತೃತೀಯ ಲಿಂಗಿಗಳಿಗೆ ಸರ್ಕಾರದ ಎಲ್ಲ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲಾ ವರ್ಗಗಳಲ್ಲೂ ಶೇ.1ರಷ್ಟು ಸಮತಲ ಮೀಸಲಾತಿ ಕಲ್ಪಿಸಲಾಗಿದೆ. ಈ ಸಂಬಂಧ 2021ರ ಜುಲೈ 6ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.