ಬೆಂಗಳೂರು :ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗೆ ಕುರಿತು ಏಪ್ರಿಲ್ 1ರ ಒಳಗಾಗಿ ಮೀಸಲಾತಿ ಪಟ್ಟಿ ಪ್ರಕಟಿಸುವುದಾಗಿ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ಹಿಂಪಡೆದು ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು 'ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆ'ಗೆ ಸರ್ಕಾರ ತಿದ್ದುಪಡಿ ತಂದಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್. ಕಿಣಗಿ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರದ ಪರ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ಮಾಹಿತಿ ನೀಡಿದರು. ಅಲ್ಲದೆ, ಈಗಾಗಲೇ ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಮಾರ್ಚ್ 1ರಂದು ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಜೊತೆಗೆ, ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಏಪ್ರಿಲ್ 1ರವರೆಗೆ ಕಾಲಾವಕಾಶ ನೀಡಿದೆ. ಅಷ್ಟರ ಒಳಗಾಗಿ ಮೀಸಲಾತಿ ಪಟ್ಟಿ ಸಿದ್ಧಪಡಿಸಿ, ಮುಂದಿನ ಕ್ರಮಕ್ಕಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ವಿವರಿಸಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 12ಕ್ಕೆ ಮುಂದೂಡಿತು.
ಬುಧವಾರ (ನಿನ್ನೆ) ನಡೆದಿದ್ದ ವಿಚಾರಣೆ ವೇಳೆ ಸರ್ಕಾರದ ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಮಾರ್ಜ್ 1ರಂದು ಅಧಿಸೂಚನೆ ಹೊರಡಿಸಿರುವುದಾಗಿ ಸರ್ಕಾರ ಮಾಹಿತಿ ನೀಡಿತ್ತು. ಅಲ್ಲದೆ. ಈ ಹಿಂದೆ ನಡೆದ ವಿಚಾರಣೆ ವೇಳಗೆ ನಿಗದಿತ ಸಮಯಕ್ಕೆ ಚುನಾವಣೆ ಪ್ರಕ್ರಿಯೆ ನಡೆಸದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ 5 ಲಕ್ಷ ದಂಡ ವಿಧಿಸಿತ್ತು. ಈ ಮೊತ್ತವನ್ನು ಪಾವತಿಸಿರುವುದಾಗಿ ನ್ಯಾಯಪೀಠಕ್ಕೆ ವಿವರಿಸಿದರು. ಅಲ್ಲದೆ, ಅರ್ಜಿದಾರರ ಪರ ಹಾಜರಿದ್ದ ವಕೀಲರು, ಹಿರಿಯ ವಕೀಲ ಕೆ.ಎನ್. ಫಣೀಂದ್ರ ಮತ್ತೊಂದು ನ್ಯಾಯಪೀಠದ ಮುಂದೆ ವಾದ ಮಂಡಿಸುತ್ತಿದ್ದ ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದರು. ಈ ಅಂಶ ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಇಂದಿಗೆ (ಫೆ.2ಕ್ಕೆ) ಮುಂದೂಡಿತ್ತು.