ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನಗರದ 24 ನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ಡಿ.ರೂಪಾ ಮೌದ್ಗಿಲ್ ಅವರು ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಮಾನಹಾನಿ ಮಾಡಿದ್ದಾರೆ. ಆದ್ದರಿಂದ, ಒಂದು ಕೋಟಿ ರೂಪಾಯಿಗಳನ್ನು ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ದೂರುದಾರರು ಚಾಮರಾಜನಗರ ಹಾಗೂ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ, ಆರೋಪಿ ಡಿ.ರೂಪಾ, ದೂರುದಾರರ ವಿರುದ್ಧ ಕಪೋಲಕಲ್ಪಿತ ಆರೋಪಗಳನ್ನು ಮಾಡಿದ್ದಾರೆ. ಹಾಗಾಗಿ, ಈ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಬೇಕು. ಆರೋಪಿ ರೂಪಾ ಮೌದ್ಗಿಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿದರು. ಅದನ್ನು ಪರಿಗಣಿಸಿದ ನ್ಯಾಯಾಲಯ, ಮೊಕದ್ದಮೆಯನ್ನು ಹೆಚ್ಚಿನ ವಿಚಾರಣೆಗಾಗಿ ಮಾ. 3ಕ್ಕೆ ಮುಂದೂಡಿತು.
ರೂಪಾ ಅವರು ಇದೇ ಫೆ.18 ಮತ್ತು 19ರಂದು ತಮ್ಮ ಫೇಸ್‌ಬುಕ್ ಅಕೌಂಟ್‌ನಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದ್ದಾರೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಹಿಂಸೆ ಉಂಟು ಮಾಡಿವೆ ಎಂದು ದೂರಿನಲ್ಲಿ ರೋಹಿಣಿ ವಿವರಿಸಿದ್ದಾರೆ.