ಬೆಂಗಳೂರು: ರಾಜ್ಯಾದ್ಯಂತ ಇಂದು ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 7 ರಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ಜನರು ಮತಗಟ್ಟೆಗೆ ತೆರಳಿ ಮತ ಚಲಾಯಿಸುತ್ತಿದ್ದಾರೆ. ಇಂದು ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪ್ರತಿಯೊಬ್ಬ ನಾಗರಿಕರೂ ತಪ್ಪದೆ ಮತ ಚಲಾಯಿಸಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಮನವಿ ಮಾಡಿದ್ದಾರೆ.
"ಇಂದು ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ತಪ್ಪದೇ ಮತ ಚಲಾಯಿಸಿ. ಯಾವುದೇ ಆಮಿಷಗಳಿಗೆ ಒಳಗಾಗದೆ, ಯೋಗ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ. ಈ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಕಂಡ 'ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ' ಕನಸನ್ನು ಸಾಕಾರಗೊಳಿಸೋಣ" ಎಂದು ಎಸ್ಆರ್ಪಿ ಟ್ವೀಟ್ ಮಾಡಿದ್ದಾರೆ. ಕಳೆದ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗಳಿಸಿತ್ತು. ಈ ಬಾರಿ ಕೂಡಾ ಗ್ರಾಮ ಸಮರ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್ ಸಾಕಷ್ಟು ಶ್ರಮ ವಹಿಸಿದೆ. ಅಧಿಕೃತ ಚಿನ್ಹೆ ಅಡಿ ಚುನಾವಣೆ ನಡೆಯದಿದ್ದರೂ ರಾಜಕೀಯ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳು ಕಣದಲ್ಲಿರುವ ಹಿನ್ನೆಲೆ ಚುನಾವಣೆ ಸಾಕಷ್ಟು ಕುತೂಹಲ ಪಡೆದುಕೊಂಡಿದೆ" ಎಂದು ಅವರು ಹೇಳಿದ್ದಾರೆ.