ಬೆಂಗಳೂರು : ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ತಿಂಗಳಿಗೆ ತಲಾ 6 ರಿಂದ 8 ಲಕ್ಷ ರೂ. ಕಮಿಷನ್ ಅನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಕೇಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಎಎಪಿ ಉಪಾಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಕೃಷಿ ಸಚಿವರನ್ನು ವಜಾಗೊಳಿಸುವಂತೆ ಮತ್ತು ಲೋಕಾಯುಕ್ತದಲ್ಲಿ ಸುಮೊಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಎಎಪಿ ರಾಜ್ಯ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಸಚಿವರು ತಮ್ಮ ಇಲಾಖೆಯ ಅಧಿಕಾರಿಗಳಿಂದ ಕಮಿಷನ್ ಕೇಳುತ್ತಿದ್ದಾರೆಂದರೆ ಅದರಲ್ಲಿ ಸಿಎಂ ಸಿದ್ದರಾಮಯ್ಯನವರ ಪಾಲೆಷ್ಟು ಎಂದು ಜನ ಕೇಳುವ ಮೊದಲು ಚಲುವರಾಯಸ್ವಾಮಿಯನ್ನು ತಕ್ಷಣ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಲೋಕಾಯುಕ್ತದಲ್ಲಿ ಸುಮೊಟೋ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಸಚಿವರ ವಿರುದ್ಧ ರಾಜ್ಯಪಾಲರಿಗೆ ಧೈರ್ಯವಾಗಿ ದೂರು ಸಲ್ಲಿಸಿರುವ ಅಧಿಕಾರಿಗಳಿಗೆ ಸರ್ಕಾರ ರಕ್ಷಣೆ ನೀಡಬೇಕು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖುದ್ದಾಗಿ ಪ್ರಕರಣವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಎಎಪಿ ದೊಡ್ಡ ಹೋರಾಟ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದರು.
ಮಂಡ್ಯ ಜಿಲ್ಲೆಯ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ ಮತ್ತು ಮದ್ದೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಉಲ್ಲೇಖಿತ ದೂರು ಸಲ್ಲಿಸಿದ್ದಾರೆ. ಅಧಿಕಾರಿ ಮತ್ತು ಸಿಬ್ಬಂದಿಗೆ ತಲಾ 6 ರಿಂದ 8 ಲಕ್ಷ ನೀಡುವಂತೆ ಕೃಷಿ ಸಚಿವರು ಮಂಡ್ಯ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ ಎಂದು ಮೋಹನ್ ಮಾಹಿತಿ ಹೇಳಿದರು.