ಬೆಂಗಳೂರು:ನಗರದ ಯಲಹಂಕ ಬಳಿಯ ಸರ್ಕಾರಿ ಜಮೀನನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಎಎಸ್ ಅಧಿಕಾರಿ ರಂಗನಾಥ್ ವಿರುದ್ಧ ಸಲ್ಲಿಸಿರುವ ದೂರಿನ ಸಂಬಂಧ ಕ್ರಮ ಜರುಗಿಸದೆ ಇರುವುದಕ್ಕೆ ವಿವರಣೆ ನೀಡುವಂತೆ ಸೂಚಿಸಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ನಗರದ ಸಾಮಾಜಿಕ ಕಾರ್ಯಕರ್ತ ಕೃಷ್ಣ ರಾಮಯ್ಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ ಅಕ್ರಮ ಎಸಗಿದ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದೇವೆ. ಆದರೆ ಈವರೆಗೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಎಸಿಬಿ ಯಾವ ಕಾರಣಕ್ಕಾಗಿ ಈವರೆಗೆ ಕ್ರಮ ಜರುಗಿಸಿಲ್ಲ ಎಂಬುದಕ್ಕೆ ವಿವರಣೆ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.