ಬೆಂಗಳೂರು: ಡಿ.ಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಚ್ಚಲು ಪ್ರೇರೇಪಿಸಿದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ನ್ಯಾಯಾಲಯ ಹೆಚ್ಚಿನ ವಿಚಾರಣೆಗಾಗಿ ಮತ್ತೊಂದು ದಿನ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ತಿರಸ್ಕರಿಸದ ಬಳಿಕ ತಲೆ ಮರೆಸಿಕೊಂಡಿದ್ದ ಸಂಪತ್ ರಾಜ್ ಬಂಧಿಸಿದ್ದ ಕೇಂದ್ರ ಅಪರಾಧ ವಿಭಾಗದ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದರು. ಕಸ್ಟಡಿ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮತ್ತೆ ನಗರದ 67 ನೇ ಸಿಸಿಎಚ್ ಕೋರ್ಟ್ ಎದುರು ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಕಾತ್ಯಾಯಿನಿ ಅವರು ಸಿಸಿಬಿ ಪೊಲೀಸರ ಮನವಿ ಮೇರೆಗೆ ಹೆಚ್ಚಿನ ತನಿಖೆಗೆ ಒಳಪಡಿಸಲು ಒಂದು ದಿನದ ಮಟ್ಟಿಗೆ ವಶಕ್ಕೆ ನೀಡಿ ಆದೇಶಿಸಿದರು.
ಇದಕ್ಕೂ ಮುನ್ನ ನಡೆದ ವಿಚಾರಣೆ ಸಂದರ್ಭದಲ್ಲಿ ಆರೋಪಿ ಪರ ವಕೀಲ ಮಹೇಶ್ ಅವರು, ಘಟನೆಗೂ ಸಂಪತ್ ರಾಜ್ ಅವರಿಗೂ ಸಂಬಂಧವಿಲ್ಲ. ಹಾಗಿದ್ದೂ ಅವರನ್ನು ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಲಾಗಿದೆ. ಸದ್ಯ ಸಂಪತ್ರಾಜ್ ಅವರಿಗೆ ಅನಾರೋಗ್ಯ ಸಮಸ್ಯೆ ಇದೆ. ಕೋವಿಡ್ ಗೆ ತುತ್ತಾಗಿದ್ದ ಅವರು ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಅಲ್ಲಿಯೇ ತನಿಖೆ ನಡೆಸಬಹುದು ಎಂದು ಕೋರಿದರು.
ಇದಕ್ಕೆ ಆಕ್ಷೇಪಿಸಿದ ಸಿಸಿಬಿ ಪರ ವಕೀಲರಾದ ಪ್ರಸನ್ನ ಕುಮಾರ್ ಅವರು, ಸಂಪತ್ ರಾಜ್ ಎರಡು ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದರೂ ವಿಚಾರಣೆಗೆ ಸಹಕರಿಸಿಲ್ಲ. ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ನಂತರ ತಲೆ ಮರೆಸಿಕೊಂಡಿದ್ದರು. ಸಂಪತ್ ರಾಜ್ ಇತರ ಆರೋಪಿಗಳ ಜೊತೆ ಹೊಂದಿರುವ ನಂಟಿನ ಬಗ್ಗೆ ಹೆಚ್ಚಿನ ತನಿಖೆ ಅಗತ್ಯವಿದೆ. ಆದ್ದರಿಂದ 9 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಬೇಕು ಎಂದು ಮನವಿ ಮಾಡಿದರು.