ಬೆಂಗಳೂರು:ಬಿಬಿಎಂಪಿ ಸೇರಿದಂತೆ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಗೆ ಮೀಸಲಾತಿ ನಿಗದಿಪಡಿಸಲು 2023ರ ಮಾರ್ಚ್ ಅಂತ್ಯದವರೆಗೂ ಕಾಲಾವಕಾಶ ನೀಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಬಿಬಿಎಂಪಿ ಚುನಾವಣೆಗೆ ಮೀಸಲಾತಿ ನಿಗದಿಗೆ ಕಾಲಾವಕಾಶ ಕೋರಿ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಮನವಿ ಆಲಿಸಿದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರಿದ್ದ ವಿಭಾಗೀಯ ಪೀಠ, 2023ರ ಮಾರ್ಚ್ ಅಂತ್ಯದ ವೇಳೆಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶ ನೀಡಿದೆ.
ವಿಚಾರಣೆ ವೇಳೆ ಸಾಲಿಸೇಟರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿ, ಹೈಕೋರ್ಟ್ ಸೂಚನೆ ಮೇರೆಗೆ ಮೀಸಲಾತಿ ನಿಗದಿಪಡಿಸುವ ಪ್ರಕಿಯೆ ನಡೆಯುತ್ತಿದೆ. ಅಲ್ಲದೆ, ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲು ನಿಗದಿಗೆ ಸಮಿತಿ ರಚನೆ ಮಾಡಿದ್ದು, ಪ್ರಕ್ರಿಯೆ ಪ್ರಗತಿಯಲ್ಲಿದೆ. ಹೀಗಾಗಿ ಕಾಲಾವಕಾಶ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.
ಈಗಾಗಲೇ ಸಮಿತಿ ರಚನೆ ಮಾಡಿದ್ದು, ಅಷ್ಟೊಂದು ಸಮಯ ಏಕೆ ಬೇಕು? ಎಂದು ನ್ಯಾಯಪೀಠ ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು, ಹಿಂದುಳಿದ ವರ್ಗಗಳಿಗೆ ಶೇ. 33ರಷ್ಟು ಮೀಸಲಾತಿ ನಿಡಬೇಕು ಎಂದು ಹಿಂದುಳಿದ ವರ್ಗಗಳ ಆಯೋಗ ಈಗಾಗಲೇ ಮನವಿ ಮಾಡಿದೆ. ಆದ್ದರಿಂದ ಪ್ರಸ್ತುತ ಮೀಸಲಾತಿ ನೀಡಲು ರಾಜ್ಯಾದ್ಯಂತ ಮನೆ ಮನೆ ಸಮೀಕ್ಷೆ ನಡೆಸಬೇಕಾಗಿದ್ದು, ಕಾಲಾವಕಾಶ ಬೇಕಾಗುತ್ತದೆ ಎಂದು ಹೇಳಿದರು.