ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆಯ ಬಗ್ಗೆ ಚರ್ಚಿಸಲು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆದಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮೇ 25 ಅಥವಾ 28 ರಂದು ಸಭೆ ನಡೆಯುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂಬರುವ ಬಿಬಿಎಂಪಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸಿದ್ಧತೆಯ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ರಾಷ್ಟ್ರೀಯ ಪದಾಧಿಕಾರಿಗಳು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ವಿವಿಧ ರಾಜ್ಯಗಳ ಪಕ್ಷದ ರಾಜ್ಯಾಧ್ಯಕ್ಷರು ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಚುನಾಯಿತರಾದ ಹಾಗೂ ಪರಾಜಿತ ಅಭ್ಯರ್ಥಿಗಳಿಗೂ ಕಾರ್ಯಕಾರಿಣಿಗೆ ಆಹ್ವಾನ ನೀಡಲಾಗುತ್ತದೆ. ಪಕ್ಷದ ಸಂಸದರು, ವಿಧಾನ ಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದು, ಪಕ್ಷ ಸಂಘಟನೆಗೆ ಒತ್ತು ನೀಡುವ ಬಗ್ಗೆ ಸಮಾಲೋಚನೆ ನಡೆಸಿ ಮಾರ್ಗದರ್ಶನ ಮಾಡಲಾಗುತ್ತದೆ ಎಂದು ಮೂಲಗಳು ಹೇಳಿವೆ.
ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆಗೆ ಕಾರಣಗಳೇನು?: ಪಕ್ಷ ಎಡವಿದ್ದೆಲ್ಲಿ? ಸೋಲಿನ ಕಹಿ ಅನುಭವದಿಂದ ಎದೆಗುಂದದೆ ಪಕ್ಷ ಸಂಘಟನೆಯ ಜತೆಗೆ ಮುಂಬರುವ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಬಗ್ಗೆಯೂ ಚರ್ಚೆ ಮಾಡಲಾಗುತ್ತದೆ. ಪಕ್ಷದ ಮುಂದಿನ ಹೋರಾಟದ ರೂಪು - ರೇಷೆಯ ಬಗ್ಗೆ ಚರ್ಚೆ ನಡೆಸಿ ಕೆಲವು ನಿರ್ಣಯಗಳನ್ನು ಅಂಗೀಕರಿಸಲಾಗುತ್ತದೆ ಎಂದು ತಿಳಿದು ಬಂದಿದೆ.