ಬೆಂಗಳೂರು: ''ಫೆಬ್ರವರಿ 11ರಂದು ರಾಜ್ಯಾದ್ಯಂತ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಒಟ್ಟು 64.13 ಲಕ್ಷ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ'' ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಹಾಗೂ ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ರಾಜ್ಯಾದ್ಯಂತರ ಶನಿವಾರ ಲೋಕ ಅದಾಲತ್ ನಡೆಸಿ, ಹೈಕೋರ್ಟ್ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಒಟ್ಟು 1,87,171 ಪ್ರಕರಣಗಳು ಹಾಗೂ 62,26,437 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿ 64,13,608 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಅಲ್ಲದೆ, 1,404 ಕೋಟಿ ರೂ. ಪರಿಹಾರ ಕೊಡಿಸಲಾಗಿದ್ದು, ಸರ್ಕಾರದ ಬೊಕ್ಕಸಕ್ಕೆ 232 ಕೋಟಿ ರೂ. ಗಳನ್ನು ಜಮೆ ಮಾಡಿಸಲಾಗಿದೆ'' ಎಂದು ಹೇಳಿದರು.
ಒಂದಾದ 200ಕ್ಕೂ ಅಧಿಕ ದಂಪತಿ:ಈ ಬಾರಿಯ ಲೋಕ ಅದಾಲತ್‌ನಲ್ಲಿ ಒಟ್ಟು 670 ವೈವಾಹಿಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 222ಕ್ಕೂ ಅಧಿಕ ಪ್ರಕರಣಗಳಲ್ಲಿ ದಂಪತಿ ರಾಜೀ ಸಂಧಾನದಿಂದ ಮತ್ತೆ ಒಂದಾಗಿ ಜೀವನ ನಡೆಸಲು ತೀರ್ಮಾನಿಸಿದ್ದಾರೆ.
20 ವರ್ಷಕ್ಕೂ ಹಳೆಯ ಪ್ರಕರಣಗಳ ಇತ್ಯರ್ಥ: ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ 23 ವರ್ಷ ಹಳೆಯ ವಿಭಾಗ ದಾವೆ ಹಾಗೂ ಬಳ್ಳಾರಿಯ ಹೊಸಪೇಟೆ ತಾಲೂಕಿನ ಹಿರಿಯ ಸಿವಿಲ್ ನ್ಯಾಯಾಧೀಶರ ಮುಂದೆ ಬಾಕಿ ಇದ್ದ 22 ವರ್ಷ ಹಳೆಯ ಪಾರ್ಟಿಷನ್ ಸೂಟ್ ಅನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದೆ.