ಬೆಂಗಳೂರು :ಪೂರ್ವ ಅರಬ್ಬಿ ಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಜುಲೈ 21ರಂದು ಬಂಗಾಳ ಉಪಸಾಗರದ ವಾಯವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಇದರ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 18 ರಿಂದ 22ರವರೆಗೆ ಗುಡುಗಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಬಗ್ಗೆ ಮಾತನಾಡಿದ ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್, ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಗುಡುಗಿನಿಂದ ಕೂಡಿದ ಭಾರಿ ಹಾಗೂ ಅತಿಭಾರಿ ಮಳೆ ನಿರೀಕ್ಷಿಸಲಾಗಿದೆ. ಕೆಲವೊಮ್ಮೆ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜುಲೈ 18 ಮತ್ತು 19ರಂದು ರೆಡ್ ಅಲರ್ಟ್ ಹಾಗೂ ಜುಲೈ 20ರಿಂದ 22ರವರೆಗೆ ಆರೆಂಜ್ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.