ಬೆಂಗಳೂರು:ಕಳೆದ ತಿಂಗಳು ನೀಡಿದ್ದ ಭರವಸೆಯಂತೆ ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ ಸಂಬಂಧ ಈ ತಿಂಗಳಲ್ಲಿಯೇ ಏಳನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದು, ಸರ್ಕಾರಿ ನೌಕರರಿಗೆ ಬೊಮ್ಮಾಯಿ ಸರ್ಕಾರ ದೀಪಾವಳಿ ಉಡುಗೊರೆ ನೀಡುತ್ತಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ತಿಂಗಳು ನಡೆದಿದ್ದ ಸರ್ಕಾರಿ ನೌಕರರ ದಿನಾಚರಣೆಯಂದು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಏಳನೇ ವೇತನ ಆಯೋಗ ರಚನೆ ಭರವಸೆ ನೀಡಿದ್ದರು. ಪುಣ್ಯಕೋಟಿ ದತ್ತು ಯೋಜನೆಗೆ ದೇಣಿಗೆ ನೀಡುವಂತೆ ಸರ್ಕಾರಿ ನೌಕರರಿಗೆ ಮಾಡಿದ್ದ ಮನವಿಯಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ರಾಜ್ಯ ಸರ್ಕಾರದ 'ಪುಣ್ಯಕೋಟಿ ದತ್ತು ಯೋಜನೆ'ಗೆ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಇತರ ಸಂಸ್ಥೆಗಳ ನೌಕರರು ದೇಣಿಗೆ ನೀಡಲು ಸಮ್ಮತಿಸಿರುವ ಕುರಿತು ಸಮ್ಮತಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದ್ದರು.
ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರು ಮತ್ತು ಸರ್ಕಾರದ ಇತರ ಸಂಸ್ಥೆಗಳ ನೌಕರರು ಸ್ವ-ಇಚ್ಛೆಯಿಂದ ದೇಣಿಗೆ ನೀಡಲು ಮುಂದಾಗಿದ್ದು, ಗ್ರೂಪ್ ಎ ಅಧಿಕಾರಿಗಳು 11,000 ರೂ., ಗ್ರೂಪ್ ಬಿ ಅಧಿಕಾರಿಗಳು 4000 ರೂ. ಹಾಗೂ ಸಿ ವೃಂದದ ನೌಕರರು 400 ರೂ. ದೇಣಿಗೆಯನ್ನು ಒಂದು ಬಾರಿಗೆ ಪಾವತಿಸಲು ಸಮ್ಮತಿಸಿದ್ದಾರೆ. ಇದನ್ನು ಅಕ್ಟೋಬರ್ ಹಾಗೂ ನವೆಂಬರ್ ತಿಂಗಳ ವೇತನದಲ್ಲಿ ಕಟಾಯಿಸುವಂತೆ ಕೋರಿದ್ದಾರೆ. ಈ ಮೊತ್ತವು ಸುಮಾರು 80 ರಿಂದ 100 ಕೋಟಿ ರೂ.ಗಳಾಗಲಿದೆ ಎಂದು ಅಂದಾಜಿಸಲಾಗಿದೆ.