ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ವೀರಶೈವ ಲಿಂಗಾಯತರು ಅತ್ಯಧಿಕ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತ ಸಮುದಾಯದ ಶಾಸಕರು ಚುನಾಯಿತರಾಗಿದ್ದಾರೆ. ವೀರಶೈವ ಲಿಂಗಾಯತ ಮತಬ್ಯಾಂಕ್ ಉಳಿಸಿಕೊಳ್ಳಲು ಸಚಿವ ಸಂಪುಟದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಅಖಿಲ ಭಾರತೀಯ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ.
ಉಳಿದ ಜಾತಿಯವರು ಏನು ಮಾಡಬೇಕು?:ಮುಖ್ಯಮಂತ್ರಿ ಹುದ್ದೆಗೆ ಲಿಂಗಾಯತ ಸಮುದಾಯದವರನ್ನು ಪರಿಗಣಿಸಬೇಕೆಂದು ಪಕ್ಷದ ಹೈಕಮಾಂಡ್ಗೆ ಪತ್ರ ಬರೆದು ಆಗ್ರಹಿಸಿರುವ ಶಾಮನೂರು ಶಿವಶಂಕರಪ್ಪನವರು ಮಂತ್ರಿ ಮಂಡಲದಲ್ಲಿ ವೀರಶೈವ ಲಿಂಗಾಯತರಿಗೆ ಹೆಚ್ಚಿನ ಅವಕಾಶ ನೀಡಬೇಕೆಂದು ತಿಳಿಸಿದ್ದಾರೆ. ಈ ಸಂಬಂಧ 'ಈಟಿವಿ ಭಾರತ್' ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಅವರು, ಪ್ರಮುಖ ಹುದ್ದೆಗಳನ್ನು ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ನೀಡಿದರೆ ಕಾಂಗ್ರೆಸ್ಗೆ ವೋಟು ಹಾಕಿದ ಉಳಿದ ಜಾತಿಯವರು ಏನು ಮಾಡಬೇಕೆಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಅಸಮಾಧಾನ ವ್ಯಕ್ತಪಡಿಸಿರುವ ಶಾಮನೂರು ಶಿವಶಂಕರಪ್ಪ:ಮುಖ್ಯಮಂತ್ರಿ ಹುದ್ದೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರ ಹೆಸರಿನ ಬಗ್ಗೆ ಮಾತ್ರ ಕಾಂಗ್ರೆಸ್ ಹೈಕಮಾಂಡ್ ಚರ್ಚೆ ಮಾಡಿದ್ದಕ್ಕೆ ಶಾಮನೂರು ಶಿವಶಂಕರಪ್ಪನವರು ಸಂದರ್ಶನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೊನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಬಗ್ಗೆ ಪ್ರಶ್ನೆ ಮಾಡಿದ್ದಾಗಿಯೂ ಅವರು ತಿಳಿಸಿದ್ದಾರೆ. ವೀರಶೈವ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ನೀಡುವಂತೆ ಅಖಿಲ ಭಾರತೀಯ ವೀರಶೈವ ಮಹಾಸಭಾದಿಂದ ಎಐಸಿಸಿ ಅಧ್ಯಕ್ಷರಿಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲ ಅವರಿಗೆ ಪತ್ರ ಬರೆಯಲಾಗಿತ್ತು ಎಂದು ತಿಳಿಸಿದ್ದಾರೆ.