ಬೆಂಗಳೂರು: ಕಾಂಗ್ರೆಸ್ ಪಕ್ಷ ಬಹುಮತ ಗಳಿಸುವಲ್ಲಿ ಹೆಚ್ಚಿನ ಕೊಡುಗೆ ನೀಡಿರುವ ವೀರಶೈವ ಲಿಂಗಾಯತ ಸಮುದಾಯದ ಶಾಸಕರೊಬ್ಬರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಶಾಸಕ ಹಾಗೂ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದ್ದಾರೆ.
ಈ ಸಂಬಂಧ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಅವರು, ಕಾಂಗ್ರೆಸ್ ಪಕ್ಷ ವೀರಶೈವ ಲಿಂಗಾಯತ ಸಮುದಾಯಕ್ಕೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಹೆಚ್ಚಿನ ಅವಕಾಶ ಕಲ್ಪಿಸಿತ್ತು. 46 ಮಂದಿಗೆ ಟಿಕೆಟ್ ನೀಡಿದ್ದು, ಅದರಲ್ಲಿ 34 ಮಂದಿ ಗೆಲ್ಲುವ ಮೂಲಕ ಶೇ.74 ರಷ್ಟು ಯಶಸ್ಸು ಸಾಧಿಸಿದ್ದೇವೆ. ಇದರ ಹೊರತಾಗಿ ಇನ್ನೂ 50 ಕ್ಷೇತ್ರಗಳಲ್ಲಿ ಇತರೆ ಸಣ್ಣ ಸಮುದಾಯಗಳನ್ನ ಆಯ್ಕೆ ಮಾಡುವಲ್ಲಿ ನಮ್ಮ ಸಮುದಾಯವು ಪ್ರಮುಖ ಪಾತ್ರ ವಹಿಸಿದೆ. ಬಿಜೆಪಿಯ ಸಾಂಪ್ರದಾಯಿಕ ಮತದಾರರು ತಮ್ಮ ನಿಷ್ಠೆಯನ್ನು ಕಾಂಗ್ರೆಸ್ ಪಕ್ಷಕ್ಕೆ ಬದಲಾಯಿಸಿದ್ದಾರೆ ಮತ್ತು ಆ ಮೂಲಕ ರಾಜ್ಯದಲ್ಲಿ 135 ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ ಎಂಬುದನ್ನು ಇದು ತೋರಿಸುತ್ತದೆ ಎಂದಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆ-2024 ರ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದೊಂದಿಗೆ ವೀರಶೈವ-ಲಿಂಗಾಯತ ಸಮುದಾಯದ ಬೆಂಬಲವನ್ನು ನಾವು ಕಾಂಗ್ರೆಸ್ ಪಕ್ಷದಲ್ಲಿಯೇ ಉಳಿದುಕೊಳ್ಳುವಂತೆ ಮಾಡಬೇಕು. ಇದರಿಂದ ಕಾಂಗ್ರೆಸ್ ಪಕ್ಷವು ನಮ್ಮ ರಾಜ್ಯದಿಂದ ಗರಿಷ್ಠ ಸಂಖ್ಯೆಯ ಸಂಸತ್ ಸದಸ್ಯರನ್ನು ಆಯ್ಕೆ ಮಾಡಿ ಕೇಂದ್ರಕ್ಕೆ ಕಳಿಸಿಕೊಡಲು ಅನುಕೂಲ ಆಗುತ್ತದೆ ಎಂದು ವಿವರಿಸಿದ್ದಾರೆ.
ಮೇಲಿನ ಸಂಗತಿಗಳನ್ನು ಪರಿಗಣಿಸಿ, ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ವೀರಶೈವ ಲಿಂಗಾಯತ ಸಮುದಾಯದ ನಾಯಕರಿಗೆ ಅವಕಾಶ ನೀಡುವಂತೆ/ಕಾಂಗ್ರೆಸ್ ಪಕ್ಷಕ್ಕೆ ನಾವು ಈಗ ಒತ್ತಾಯಿಸುತ್ತೇವೆ. ನಮ್ಮ ಸಮುದಾಯದ ಶಾಸಕರ ಸಂಖ್ಯೆಗೆ ಅನುಗುಣವಾಗಿ ಹಲವಾರು ಕ್ಯಾಬಿನೆಟ್ ಸ್ಥಾನಗಳಿಗೆ ಅವಕಾಶ ಕಲ್ಪಿಸಲು ಅಥವಾ ಅವಕಾಶ ನೀಡುವಂತೆ ನಾವು ನಿಮ್ಮಲ್ಲಿ ವಿನಂತಿಸುತ್ತೇವೆ ಎಂದು ಶಾಮನೂರು ಶಿವಶಂಕರಪ್ಪ ಮನವಿ ಮಾಡಿದ್ದಾರೆ.