ಬೆಂಗಳೂರು: ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟಕ್ಕೆ ಅಯೋಧ್ಯೆಯಿಂದ ವಿಮಾನಯಾನ ಹಾಗೂ ರೈಲ್ವೆ ಮೂಲಕ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ಬಗ್ಗೆ ಶೀಘ್ರ ಕ್ರಮಕೈಗೊಳ್ಳುವುದಾಗಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದರು.
ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ಹನುಮನ ಜನ್ಮಸ್ಥಳ ಅಂಜನಾದ್ರಿಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು 100 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿದರು ಮುಜರಾಯಿ ಇಲಾಖೆಯ ವತಿಯಿಂದ ಫೆಬ್ರವರಿ 22 ರಂದು ದೈವ ಸಂಕಲ್ಪ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಭಕ್ತರನ್ನು ಸೆಳೆಯುವ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಮೂಲಕ ಅಭಿವೃದ್ಧಿಗೊಳಿಸುವ ಯೋಜನೆ ಇದಾಗಿದೆ. ಈ ಯೋಜನೆಯ ಅಡಿಯಲ್ಲಿ ಅಂಜನಾದ್ರಿ ಬೆಟ್ಟವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. 13 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳುವ ನಿಟ್ಟಿನಲ್ಲಿ 5.50 ಕೋಟಿ ರೂಪಾಯಿಗಳ ಪ್ರಸ್ತಾವನೆ ನಮ್ಮ ಮುಂದಿದೆ ಎಂದು ಹೇಳಿದರು.
ಟೆಂಪಲ್ ಟೂರಿಸಂಗೆ ಆದ್ಯತೆ: ಪ್ರಧಾನಿ ನರೇಂದ್ರ ಮೋದಿ ಅವರ ದೇವಸ್ಥಾನದ ಸಮಗ್ರ ಅಭಿವೃದ್ಧಿಯ ಕನಸನ್ನ ನನಸು ಮಾಡುವ ನಿಟ್ಟಿನಲ್ಲಿ ನಮ್ಮ ಮುಜರಾಯಿ ಇಲಾಖೆ ಕಾರ್ಯತತ್ಪರವಾಗಿದೆ. ಪ್ರಧಾನಿ ಅವರ ಟೆಂಪಲ್ ಟೂರಿಸಂ ಅಳವಡಿಕೆಗೂ ಆದ್ಯತೆಯನ್ನು ನೀಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ರಾಮಜನ್ಮಭೂಮಿ ಅಯೋಧ್ಯೆಯಿಂದ ಹನುಮ ಜನ್ಮಸ್ಥಳ ಅಂಜನಾದ್ರಿಗೆ ಸಂಪರ್ಕ ಕಲ್ಪಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ವಿಮಾನಯಾನ ಹಾಗೂ ರೈಲ್ವೆ ಸಂಪರ್ಕ ಪ್ಯಾಕೇಜನ್ನು ನಿರ್ಮಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದರು.
ಅಂಜನಾದ್ರಿ ಬೆಟ್ಟದಲ್ಲಿ ವಸತಿ ಸೇರಿದಂತೆ ಸಮಗ್ರ ಅಭಿವೃದ್ಧಿ: ಅಂಜನಾದ್ರಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ವಸತಿ ಸೌಲಭ್ಯ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಯೋಜನೆಯನ್ನು ರೂಪಿಸಲಾಗಿದೆ. ವಸತಿ ಸೌಲಭ್ಯ, ಶೌಚಾಲಯ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಭೋಜನಾಲಯ, ಸ್ನಾನಘಟ್ಟ, ರಸ್ತೆ, ಒಳಚರಂಡಿ ಸೇರಿದಂತೆ ಹತ್ತು ಹಲವು ಕಾರ್ಯಗಳನ್ನು ಅಳವಡಿಸಲಾಗಿದೆ ಎಂದು ಹೇಳಿದರು.
ಓದಿ:ಬೆಂಗಳೂರು: ಗಾಂಧಿನಗರದ ಹೋಟೆಲ್ ಟೆರೇಸ್ನಲ್ಲಿ ಅಗ್ನಿ ಅವಘಡ