ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶಿರಾ ಮತ್ತು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸಿದರು.
ಸದಾಶಿವ ನಗರದ ತಮ್ಮ ನಿವಾಸದಲ್ಲಿ ಡಿಕೆಶಿ, ಶಿರಾ ಮತ್ತು ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸಿದರು. ಈಗಾಗಲೇ ಇಬ್ಬರೂ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಅ.14 ರಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಅಭ್ಯರ್ಥಿ ಕುಸುಮ ಹನುಮಂತರಾಯಪ್ಪ ಹಾಗೂ 15ರಂದು ಶಿರಾ ಕ್ಷೇತ್ರದ ಅಭ್ಯರ್ಥಿ ಜಯಚಂದ್ರ ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಈಗಾಗಲೇ ಪಕ್ಷ ಹಲವು ನಾಯಕರಿಗೆ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಈ ಎಲ್ಲಾ ನಾಯಕರು ನಾಮಪತ್ರ ಸಲ್ಲಿಕೆ ಸಂದರ್ಭ ಅಭ್ಯರ್ಥಿಗಳ ಜೊತೆ ಉಪಸ್ಥಿತರಿರಲಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಶಿರಾ ಕ್ಷೇತ್ರವನ್ನು ಕಾಂಗ್ರೆಸ್ ಕಳೆದುಕೊಂಡಿತ್ತು. ಇಲ್ಲಿ ಗೆಲುವು ಸಾಧಿಸಿದ್ದ ಜೆಡಿಎಸ್ ಶಾಸಕ ಬಿ ಸತ್ಯನಾರಾಯಣ ಹೃದಯಾಘಾತದಿಂದ ನಿಧನರಾದ ಹಿನ್ನೆಲೆ ಕ್ಷೇತ್ರ ತೆರವಾಗಿತ್ತು. ಇನ್ನು ರಾಜರಾಜೇಶ್ವರಿ ನಗರ ಕ್ಷೇತ್ರದ ಅಂದಿನ ಕಾಂಗ್ರೆಸ್ ಶಾಸಕರಾಗಿದ್ದ ಮುನಿರತ್ನ ರಾಜೀನಾಮೆಯಿಂದಾಗಿ ತೆರವಾಗಿತ್ತು. ಇದೀಗ ಎರಡೂ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್ ಗೆಲುವಿಗಾಗಿ ವಿಶೇಷ ಕಾರ್ಯತಂತ್ರ ರೂಪಿಸಿದೆ.