ಬೆಂಗಳೂರು: ಮತ್ಸ್ಯತ್ರಯ ಯೋಜನೆಯನ್ನು ರಾಜೀವ್ ಗಾಂಧಿ ವಸತಿ ನಿಗಮದಿಂದ ವಾಪಸ್ ಪಡೆದು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಮನೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ ಹಾಗೂ ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸಪೂಜಾರಿ ಹೇಳಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಲಾಲಾಜಿ ಆರ್.ಮೆಂಡನ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2017-18ನೇ ಸಾಲಿನಲ್ಲಿ ಮೂರು ಸಾವಿರ ಮನೆಗಳನ್ನು ನಿರ್ಮಾಣ ಮಾಡಲು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ವಹಿಸಿ 2,470 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಆದರೆ, ನಿಗಮದಿಂದ ಮನೆ ನಿರ್ಮಾಣ ಕಾರ್ಯ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ವಾಪಸ್ ಪಡೆಯಲಾಗುತ್ತಿದೆ.
ಬಸವ ವಸತಿ ಯೋಜನೆಗೆ ನೀಡಲಾಗುವ ಪ್ರಮಾಣದಲ್ಲೇ ಮೀನುಗಾರರ ವಸತಿ ಯೋಜನೆಗೂ ಅನುದಾನ ಒದಗಿಸಲಾಗಿದೆ. ಅನುದಾನ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಬಗ್ಗೆ ಸಂಪುಟಸಭೆಯಲ್ಲಿ ಒಪ್ಪಿಗೆ ಪಡೆದು ಪರಿಶೀಲನೆ ಮಾಡಲಾಗುವುದು ಎಂದು ಹೇಳಿದರು.