ಬೆಂಗಳೂರು: ಐಟಿ, ಇಡಿ ಹಾಗೂ ಸಿಬಿಐ ಮುಂತಾದ ಸ್ವಾಯತ್ತ ಸಂಸ್ಥೆಗಳನ್ನು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ರಾಜ್ಯದ ಕಾಂಗ್ರೆಸ್ ನಾಯಕರನ್ನು ಬೆದರಿಸಲು ಬಿಜೆಪಿ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿರುವ ಅವರು ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಬಿಜೆಪಿ ಹೈಕಮಾಂಡ್ಗೆ ಕೂಡ ಕರ್ನಾಟಕದ ಬಿಜೆಪಿ ಮುಳುಗುತ್ತಿದೆ, ಮುಂದೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಗೊತ್ತಿದೆ. ತಮ್ಮ ದ್ವೇಷದ ರಾಜಕೀಯ ಮತ್ತು ಹಿಂದುತ್ವದ ಅಜೆಂಡಾ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕೆಲಸ ಮಾಡುವುದಿಲ್ಲ ಎಂಬುದು ಅವರಿಗೆ ಅರ್ಥವಾಗಿದೆ. ಅವರಿಗೆ ಉಳಿದಿರುವ ಏಕೈಕ ಮಾರ್ಗವೆಂದರೆ ಅಧಿಕಾರದ ದುರುಪಯೋಗ ಮತ್ತು ತಮ್ಮ ಹಣಬಲದ ಬಳಕೆ ಎಂದೂ ದೂರಿದ್ದಾರೆ.
ಹಣ ನೀಡಿದರೂ ಕೂಡ ರಾಜ್ಯದ ಜನ ಕಾಂಗ್ರೆಸ್ಗೆ ಮತ ನೀಡಬೇಕು ಎಂದು ನಿರ್ಧಾರ ಮಾಡಿದ್ದಾರೆ. ಬಿಜೆಪಿ ಸರ್ಕಾರ ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಸರ್ಕಾರ. ರಾಜ್ಯದ ಮತದಾರರಿಗೆ ತಾವು ಹಿಂದಿನ ಚುನಾವಣೆಯಲ್ಲಿ ಮಾಡಿದ ತಪ್ಪಿನ ಅರಿವಾಗಿದೆ, ಜನ ಹಿಂದಿನ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಸ್ಮರಿಸುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲಿಗೇ ಹೋದರೂ ಬಹುತೇಕ ಜನ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳುತ್ತಿದ್ದಾರೆ, ಇದರಿಂದ ಬಿಜೆಪಿಗರು ಬೆದರಿದ್ದಾರೆ. ಬಿಜೆಪಿಗೆ ಕರ್ನಾಟಕದಲ್ಲಿ ಸೋಲಿನ ಭೀತಿ ಆರಂಭವಾಗಿದೆ. ಎಲ್ಲಾ ಸಮೀಕ್ಷೆಗಳು ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳುತ್ತಿವೆ.
ಸುರ್ಜೇವಾಲಾ ಅವರು ಹೇಳಿದಂತೆ ಹಲವು ಹಾಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿಯ ಅಧ್ಯಕ್ಷರು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂದು ಕರ್ನಾಟಕದ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಕಾರಣದಿಂದ ಹಾಲಿ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ. ಅವರ್ಯಾರು ಮೂರ್ಖರಲ್ಲ, ತಾವು ಬಿಜೆಪಿಯಲ್ಲಿಯೇ ಮುಂದುವರೆದರೆ ಮುಂದಿನ ಚುನಾವಣೆಯಲ್ಲಿ ಸೋಲುತ್ತೇವೆ ಎಂಬುದು ಅವರಿಗೆ ಗೊತ್ತಾಗಿದೆ ಎಂದು ವಿವರಿಸಿದ್ದಾರೆ.