ಬೆಂಗಳೂರು:ಸಿಎಂ ಯಡಿಯೂರಪ್ಪ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಸಿಎಂ ಅವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಮಾಡುತ್ತಾ ಬಂದಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೇ ಮಾತಿಗೆ ಬದ್ಧರಾಗಿ ಉಳಿಯಬೇಕು. ಈಶ್ವರಪ್ಪ ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.
ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ. ಇದು ಬಿಜೆಪಿ ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪ ಬಾಯಿಮುಚ್ಚಿಸಲು ಪ್ರಯತ್ನಿಸದೇ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು. ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ಮಾತ್ರ ಆರೋಪ ಪಟ್ಟಿ ಸಲ್ಲಿಸದೇ ಅದರ ಪ್ರತಿಯನ್ನು ಪ್ರಧಾನಿ ಮೋದಿ ಮತ್ತು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.