ಬೆಂಗಳೂರು :ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಗುಡುಗಿದ್ದು, ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ದಸರಾ ಹಬ್ಬ ಆಚರಣೆ ಮಾಡಿ ಠಾಣೆ ಮುಂಭಾಗವೇ ಫೋಟೋ ಸೆಷನ್ ನಡೆಸಿರುವುದನ್ನು ಖಂಡಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಟ್ವೀಟ್ ಮೂಲಕ ಸಿಎಂ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಗಳೇ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ ಕನಸು ನನಸಾಗಬಹುದು ಎಂದಿದ್ದಾರೆ.
ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ ಪೊಲೀಸ್‌ಗಿರಿಯ ದೌರ್ಜನ್ಯ. ಇನ್ನೊಂದೆಡೆ, ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ. ಮತ್ತೊಂದೆಡೆ, ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ. ಇದಕ್ಕೆಲ್ಲ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಹಿರಂಗ ಬೆಂಬಲ. ರಾಜ್ಯದಲ್ಲಿ ಸರ್ಕಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.
ಗೂಂಡಾಗಿರಿಯನ್ನು 'ಕ್ರಿಯೆಗೆ ಪ್ರತಿಕ್ರಿಯೆ' ಎಂದು ಸಮರ್ಥಿಸಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ ಎಂದು ಸಲಹೆ ನೀಡಿದ್ದಾರೆ.
ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ. ಬಸವರಾಜ ಬೊಮ್ಮಾಯಿ ಅವರೇ, ಸಂವಿಧಾನ ಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ ಎಂದಿದ್ದಾರೆ.
ಓದಿ:ಹೆಚ್ಡಿಕೆ ಹಿಟ್ & ರನ್ ಮಾಡ್ತಾರೆ, ಅವರೊಬ್ಬ ಸುಳ್ಳ: ಸಿದ್ದು ಕಿಡಿ