ಬೆಂಗಳೂರು:ಕೇಂದ್ರ ಸರ್ಕಾರದ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದರೂ ರಾಜ್ಯ ಬಿಜೆಪಿ ನಾಯಕರು ಸುಮ್ಮನೆ ಕೂತಿರುವುದು ದುರಂತ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿರುವ ಅವರು, ಕರ್ನಾಟಕಕ್ಕೆ ವಿಶೇಷ ಅನುದಾನ ನೀಡದಿರುವ ಬಗ್ಗೆ ನಿರ್ಮಲಾ ಸೀತಾರಾಮನ್ ನೀಡಿರುವ ಕಾರಣ ಸಮರ್ಥನೀಯವಲ್ಲ. ಅವರು ತಪ್ಪು ವ್ಯಾಖ್ಯಾನವನ್ನು ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ. ತಮ್ಮ ತಪ್ಪನ್ನು ಮುಚ್ಚಿ ಹಾಕಲು ಅವರು ಯತ್ನಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.
15ನೇ ಹಣಕಾಸು ಆಯೋಗ ರಾಜ್ಯಕ್ಕೆ 5,495 ಕೋಟಿ ರೂ. ವಿಶೇಷ ಅನುದಾನದ ಶಿಫಾರಸು ಮಾಡಿತ್ತು. ಆದರೆ ಕರ್ನಾಟಕದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅದನ್ನು ತಿರಸ್ಕರಿಸಿದರು. 2020-21ನೇ ಸಾಲಿನಲ್ಲಿ ತನ್ನ ಪರಿಷ್ಕೃತ ಕೇಂದ್ರದ ತೆರಿಗೆ ಪಾಲು 28,591 ಕೋಟಿ ರೂ. ಆಗಿತ್ತು. 15ನೇ ಹಣಕಾಸು ಆಯೋಗ ಅಂದಾಜಿಸಿದ್ದು 31,180 ಕೋಟಿ ರೂ. ಇದು ಕರ್ನಾಟಕಕ್ಕೆ ವಿಶೇಷ ಅನುದಾನ ನೀಡಲು ಪ್ರಮುಖ ಕಾರಣವಾಗಿದೆ. ಆದರೆ ನಿರ್ಮಲಾ ಸೀತಾರಾಮನ್ ಅವರು ವಿಶೇಷ ಅನುದಾನವನ್ನು ಆದಾಯ ಕೊರತೆಗಾಗಿನ ಅನುದಾನ ಎಂದು ತಪ್ಪಾಗಿ ಬಿಂಬಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.