ಬೆಂಗಳೂರು: ರಾಜ್ಯದಲ್ಲಿ ಮತ್ತೆ ಉಲ್ಬಣಗೊಳ್ಳುತ್ತಿರುವ ಕೊರೊನಾ ಪ್ರಕರಣಗಳು ಸರ್ಕಾರದ ಭ್ರಷ್ಟಾಚಾರವನ್ನು ಬಯಲು ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತೆ ಕೊರೊನಾ ಮತ್ತೆ ಅವತರಿಸಿ ಕೇಕೆ ಹಾಕುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೆ, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಸಂಪನ್ಮೂಲ ವ್ಯಯ ಮಾಡಬೇಕಾಗಿದೆ ಎಂಬ ಕುಂಟು ನೆಪ ಹೇಳಿ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿದ ಯಡಿಯೂರಪ್ಪ ಅವರು ಈಗ ಏನು ಹೇಳುತ್ತಾರೆ? ಅಷ್ಟೊಂದು ಆದ್ಯತೆ ನೀಡಿದ್ದರೆ ಕೊರೊನಾ ನಿಯಂತ್ರಣಕ್ಕೆ ಬರಬೇಕಿತ್ತಲ್ಲಾ? ಯಾಕೆ ನಿಯಂತ್ರಣ ತಪ್ಪಿದೆ? ಎಂದು ಸರಣಿ ಪ್ರಶ್ನೆಗಳನ್ನು ಹಾಕಿದ್ದಾರೆ.
ಕೊರೊನಾ ನಿರ್ವಹಣೆಗಾಗಿ 5,372 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಮೊನ್ನೆ ಮಂಡಿಸಿದ್ದ ಬಜೆಟ್ನಲ್ಲಿ ಹೇಳಿರುವ ಮುಖ್ಯಮಂತ್ರಿಗಳು, ಮಾಡಿರುವ ಖರ್ಚಿನ ವಿವರ ಮಾತ್ರ ತಿಳಿಸಿಲ್ಲ. ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಿ ಎಂದರು.
ಕೊರೊನಾ ವೈರಸ್‌ಗೆ ಲಸಿಕೆ ಬಂದಿದೆ. ನಿಮ್ಮ ಸರ್ಕಾರಕ್ಕೆ ತಗುಲಿರುವ ಭ್ರಷ್ಟಾಚಾರದ ವೈರಸ್‌ಗೆ ಎಲ್ಲಿಂದ ಲಸಿಕೆ ತರುವುದು? ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೇ ಕೆಲಸ ಮಾಡಿ ಜನರನ್ನು ಉಳಿಸಿ ಎಂದು ಟ್ವಿಟರ್ನಲ್ಲಿ ಮನವಿ ಮಾಡಿದ್ದಾರೆ.