ಬೆಂಗಳೂರು:ಸಿದ್ದರಾಮಯ್ಯನವರನ್ನೇ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿ ಕಾಂಗ್ರೆಸ್ ಹೈಕಮಾಂಡ್ ಇಂದು (ಗುರುವಾರ) ಘೋಷಿಸಿದೆ. ಈ ಮೂಲಕ ಕಳೆದ 5 ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಹಗ್ಗಜಗ್ಗಾಟಕ್ಕೆ ಅಧಿಕೃತ ತೆರೆ ಬಿದ್ದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶ ಕಂಡಿದೆ.
ಕೆಲವು ಷರತ್ತುಗಳ ಸೂತ್ರದಡಿ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಪಕ್ಷದ ಘಟಾನುಘಟಿ ನಾಯಕರ ಆಂತರಿಕ ಬೇಗುದಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ.
ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮುಂದುವರಿಕೆ: ನವದೆಹಲಿಯಲ್ಲಿಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಎಐಸಿಸಿ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಡಿ.ಕೆ.ಶಿವಕುಮಾರ್ ಸಂಸತ್ ಚುನಾವಣೆ ಮುಗಿಯುವವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಮೇ 20ರಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಜೊತೆ ಕೆಲವು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅವರು ತಿಳಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಾನಮನಸ್ಕ ಪಕ್ಷಗಳ ಜನರನ್ನು ಆಹ್ವಾನಿಸಲಾಗುತ್ತದೆ ಎಂದು ಅವರು ಇದೇ ವೇಳೆ ತಿಳಿಸಿದರು.
ಭಾರತ್ ಜೋಡೋ ಪಾದಯಾತ್ರೆ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ತಂದು ಕೊಟ್ಟಿದೆ. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ವಿಶೇಷ ಧನ್ಯವಾದಗಳು. ಪ್ರಮುಖವಾಗಿ ರಾಜ್ಯದಲ್ಲಿ ಪಕ್ಷವನ್ನು ನೆಲಮಟ್ಟದಿಂದ ಕಟ್ಟಿ ಬೆಳೆಸಿದ ಶ್ರೇಯಸ್ಸು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗೆ ಸಲ್ಲಬೇಕು. ಸಿದ್ದರಾಮಯ್ಯ ಮಾಸ್ ಲೀಡರ್ ಆದರೆ, ಡಿ.ಕೆ.ಶಿವಕುಮಾರ್ ಡೈನಾಮಿಕ್ ಲೀಡರ್. ಮುಖ್ಯಮಂತ್ರಿ ಹುದ್ದೆಗೆ ಇಬ್ಬರೂ ಸಮಾನರು. ಹಾಗಾಗಿ ಮುಖ್ಯಮಂತ್ರಿ ಆಯ್ಕೆ ವಿಚಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಕಳೆದ ಐದು ದಿನಗಳಿಂದ ನಡೆದುಬಂದ ರಾಜಕೀಯ ವಿದ್ಯಮಾನಗಳನ್ನು ವಿವರಿಸಿದರು.
ರಾಜ್ಯದ ಮುಖ್ಯಮಂತ್ರಿ ವಿಚಾರವಾಗಿ ಕಳೆದ ಐದು ದಿನಗಳಿಂದ ಈ ಬಗ್ಗೆ ಚರ್ಚೆ ಮಾಡುತ್ತಾ ಬರಲಾಗಿತ್ತು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಅವರ ಜೊತೆ ಮಾತುಕತೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ. ಕಾಂಗ್ರೆಸ್ ಪಕ್ಷ ನೀಡಿದ ಭರವಸೆಗಳನ್ನು ಈಡೇರಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಉತ್ತಮ ಆಡಳಿತ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.