ಬೆಂಗಳೂರು:ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಸಿಂಗ್ ಗೆಹ್ಲೋಟ್ ಹೊಸ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ವೇಳೆ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಮತ್ತು ಎಂಟು ಜನ ಸಚಿವರು ಸಹ ಪದಗ್ರಹಣ ಮಾಡಿದರು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಅದ್ಧೂರಿ ಸಮಾರಂಭದಲ್ಲಿ ಸಿದ್ದರಾಮಯ್ಯ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಡಿ ಕೆ ಶಿವಕುಮಾರ್ ಶ್ರೀಗಂಗಾಧರ ಅಜ್ಜನ ಹೆಸರಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಡಾ. ಜಿ. ಪರಮೇಶ್ವರ್ ಸಂವಿಧಾನದ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸತೀಶ್ ಜಾರಕಿಹೊಳಿ ಬುದ್ಧ, ಬಸವ ಮತ್ತು ಅಂಬೇಡ್ಕರ್ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಜೊತೆಗೆ ಹೆಚ್ಕೆ ಮುನಿಯಪ್ಪ, ಕೆಜೆ ಜಾರ್ಜ್, ಎಂಪಿ ಪಾಟೀಲ್, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್, ಪ್ರಿಯಾಂಕ್ ಖರ್ಗೆ ಪ್ರಮಾಣ ವಚನ ಸ್ವೀಕರಿಸಿದರು.
ಪದಗ್ರಹಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಛತ್ತೀಸ್‌ಗಢ ಸಿಎಂ ಭೂಪೇಶ್ ಬಾಘೇಲ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಬಿಹಾರ ಸಿಎಂ ನಿತೀಶ್ ಕುಮಾರ್, ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮತ್ತು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಮಕ್ಕಳ್ ನೀದಿ ಮೈಯಂ ಮುಖ್ಯಸ್ಥ, ನಟ ಕಮಲ್ ಹಾಸನ್, ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ ನಾಥ್ ಸೇರಿದಂತೆ ಹಲವು ಗಣ್ಯರು ಮತ್ತು ನಾಯಕರು ಉಪಸ್ಥಿತರಿದ್ದರು.