ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಲು ಸಿದ್ಧವಾಗಿರುವ ಸಿಡಿ ಪ್ರಕರಣದ ಯುವತಿ ಪರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬ್ಯಾಟ್ ಬೀಸಿದ್ದಾರೆ.
ಸರಣಿ ಟ್ವೀಟ್ ಮೂಲಕ ಯುವತಿ ನಿಲುವನ್ನು ಬೆಂಬಲಿಸಿರುವ ಅವರು, ಆಕೆಯ ಸ್ಥಿತಿ ನೆನೆದು ಮರುಕ ವ್ಯಕ್ತಪಡಿಸಿದ್ದಾರೆ. ಸಿಡಿ ಹಗರಣದ ಯುವತಿ ತನಗೆ ಪ್ರಾಣಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು, ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ, ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಇಡೀ ರಾಜ್ಯ ಬಿಜೆಪಿ ಸರ್ಕಾರವೇ ಹೊಣೆಯಾಗುತ್ತದೆ. ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗೆ ಯುವತಿ ಬರೆದ ಪತ್ರದಲ್ಲಿ ಎಸ್ಐಟಿ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿರುವುದು ಮಾತ್ರವಲ್ಲ, ಅವರು ಸಾಕ್ಷ್ಯನಾಶ ಮಾಡುತ್ತಿದ್ದಾರೆ, ತನ್ನ ವಿರೋಧಿಗಳ ಜೊತೆ ಶಾಮೀಲಾಗಿದ್ದಾರೆ ಎಂದೆಲ್ಲ ಆರೋಪಿಸಿರುವುದು ಗಂಭೀರವಾದ ವಿಷಯ ಎಂದು ಸಿದ್ದರಾಮಯ್ಯ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.