ಬೆಂಗಳೂರು:ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜಾಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತ ಯುವತಿಯನ್ನು ಪೊಲೀಸರಿಗೆ ಪತ್ತೆ ಹಚ್ಚಲು ಆಗಿಲ್ಲ. ಇದು ನಾಚಿಕೆಗೇಡಿನ ಸಂಗತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಟ್ವೀಟ್ ವಿವರ..
ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಕಾನೂನುಬದ್ಧವಾದ ಅವಳ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು?
ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ. ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ. ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನರ್ಥ?
ಮಾಧ್ಯಮಗಳಲ್ಲಿ ಪ್ರಕಟ/ಪ್ರಸಾರವಾಗಿರುವ ಯುವತಿಯದ್ದು ಎನ್ನಲಾದ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇಲ್ಲ. ಪೊಲೀಸರು ತನ್ನ ವಿರುದ್ಧವೇ ಸಂಚು ಮಾಡುತ್ತಿದ್ದಾರೆಂಬ ಅರ್ಥದಲ್ಲಿ ಯುವತಿ ಮಾತನಾಡುತ್ತಿದ್ದಾಳೆ. ಗೃಹಸಚಿವರು ಈ ಬಗ್ಗೆ ಗಮನಹರಿಸಬೇಕು.
ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ?, ಆಕೆಯೇನು ವಿಜಯ ಮಲ್ಯನೋ, ಇಲ್ಲವೇ ನೀರವ್ ಮೋದಿಯೋ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಸಿಡಿ ಗಲಾಟೆ ನಡುವೆಯೇ ಬೆಳಗಾವಿಯತ್ತ ಕೆಪಿಸಿಸಿ ಅಧ್ಯಕ್ಷ ಡಿಕೆಶಿ!