ಬೆಂಗಳೂರು: ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅನುಮತಿ ನೀಡದೆ ಕೇಂದ್ರ ಸರ್ಕಾರ ಕನ್ನಡಿಗರಿಗೆ ದ್ರೋಹ ಎಸಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡಿಗರಿಗೆ ದ್ರೋಹ
ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿರುವ ಅವರು, ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ, ನರೇಂದ್ರ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ನಿರುದ್ಯೋಗದ ಸಮಸ್ಯೆ
ಐಬಿಪಿಎಸ್ ಇದೀಗ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 3,000 ಕಾರಕೂನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇವುಗಳಲ್ಲಿ 407 ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಕನ್ನಡಕ್ಕೆ ಆಗಿರುವ ಅನ್ಯಾಯದಿಂದಾಗಿ ತೀವ್ರ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗ ಯುವಜನರು ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ ಎಂದಿದ್ದಾರೆ.
ಹಿಂದಿಯೇತರ ಭಾಷಿಕರಿಗೆ ಅನ್ಯಾಯ
2014ಕ್ಕಿಂತ ಮೊದಲು ಐಬಿಪಿಎಸ್ ನಡೆಸುತ್ತಿದ್ದ ಪರೀಕ್ಷೆಗಳಲ್ಲಿ ರಾಜ್ಯ ಭಾಷೆಗಳಲ್ಲಿಯೂ ಬರೆಯುವ ಅವಕಾಶ ಇತ್ತು. 2014ರಲ್ಲಿ ಕೇಂದ್ರ ಬಿಜೆಪಿ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ಮಾಡಿ ಇಂಗ್ಲಿಷ್ ಮತ್ತು ಹಿಂದಿಯೇತರ ಭಾಷಿಕ ಯುವಜನರಿಗೆ ಅನ್ಯಾಯ ಮಾಡಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಹಿಂದಿನ ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರವನ್ನೂ ಬರೆದಿತ್ತು. ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ನಮ್ಮ ಸರ್ಕಾರ ಕೇಂದ್ರ ಬಿಜೆಪಿ ಸರ್ಕಾರದ ಗಮನ ಸೆಳೆದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸುವ ಭರವಸೆಯನ್ನು ನೀಡಿದ್ದರು. ಆದರೆ, ಆ ಭರವಸೆಯನ್ನು ಇಂದಿಗೂ ಈಡೇರಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ವಿರುದ್ಧ ಸಿದ್ದು ಕಿಡಿ
ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ಯೋಜನೆಗಳ ಅನುಷ್ಠಾನ ಬ್ಯಾಂಕ್ಗಳ ಮೂಲಕವೇ ನಡೆಯುವುದರಿಂದ ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಗ್ರಾಮೀಣ ಪ್ರದೇಶದ ಜನತೆ ಹೆಚ್ಚು ಹೆಚ್ಚು ಬ್ಯಾಂಕ್ ಅನ್ನು ಅವಲಂಬಿಸಿದ್ದಾರೆ. ಕನ್ನಡ ಬಾರದ ಸಿಬ್ಬಂದಿಯಿಂದಾಗಿ ಈ ಜನಸಮುದಾಯ ಪ್ರತಿನಿತ್ಯ ಕಿರುಕುಳ ಅನುಭವಿಸುತ್ತಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೆ ಮತ್ತೆ ಕನ್ನಡ-ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಾ ಬಂದಿದ್ದಾರೆ. ಇದೀಗ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿಯೂ ಸಚಿವರು ಈ ಅನ್ಯಾಯವನ್ನು ಮುಂದುವರಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಸೌಲಭ್ಯಗಳ ಸುನಾಮಿ ಎಲ್ಲಿ?
ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸೌಲಭ್ಯಗಳ ಸುನಾಮಿ ಬರಲಿದೆ ಎಂದು ಲೋಕಸಭಾ ಚುನಾವಣೆಯ ಕಾಲದಲ್ಲಿ ಬುರುಡೆ ಬಿಟ್ಟಿದ್ದರು. ರಾಜ್ಯದಿಂದ ಆಯ್ಕೆಯಾದ 25 ಬಿಜೆಪಿ ಸಂಸದರು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯ ಬಗ್ಗೆ ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ. ತಮ್ಮನ್ನು ರಾಜ್ಯದ ಹುಲಿ-ಸಿಂಹಗಳೆಂದು ವಂದಿ-ಮಾಗದರಿಂದ ಘೋಷಣೆ ಕೂಗಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವಾಗ ಮಾತ್ರ ಬೆದರಿದ ಇಲಿಯಾಗುತ್ತಾರೆ. ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಬಿಎಸ್ವೈ ತಕ್ಷಣ ಪ್ರಧಾನಮಂತ್ರಿಗಳ ಗಮನಸೆಳೆದು ಕನ್ನಡಿಗರಿಗೆ ನ್ಯಾಯಒದಗಿಸಬೇಕು ಎಂದಿದ್ದಾರೆ.
ಇದನ್ನೂ ಓದಿ:ಕೇಂದ್ರ ಸಚಿವರ ಜತೆ ಸಿಎಂ ಸಭೆ: ಮೇಕೆದಾಟು ಯೋಜನೆಗೆ ಮುಹೂರ್ತ ನಿಗದಿ ಮಾಡುವಂತೆ ಡಿಕೆಶಿ ಒತ್ತಾಯ