ಬೆಂಗಳೂರು: ಸಿಎಂ ಚುನಾವಣಾ ಪ್ರಚಾರದಲ್ಲಿ ಮೈಮರೆಯದೆ ತಕ್ಷಣ ರಸಗೊಬ್ಬರ ಕೊರತೆ ನೀಗಿಸಲು ಕ್ರಮಕೈಗೊಳ್ಳಬೇಕು. ಜೊತೆಗೆ ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿಂದ ರೈತರು ಕಂಗಾಲಾಗಿದ್ದಾರೆ. ಬಿ.ಎಸ್ ಯಡಿಯೂರಪ್ಪ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಹಾವೇರಿಯಲ್ಲಿ ರಸಗೊಬ್ಬರ ಕೇಳಿದವರಿಗೆ ಗುಂಡು ಹೊಡೆದು ಇಬ್ಬರು ರೈತರನ್ನು ಸಾಯಿಸಿದ್ದರು. ಈಗಿನ ಸರ್ಕಾರದ ನಿರ್ಲಕ್ಷ್ಯ ನೋಡಿದರೆ ಬಸವರಾಜ ಬೊಮ್ಮಾಯಿ ಅವರಿಗೂ ಅದೇ ದುರುದ್ದೇಶ ಇದ್ದಂತಿದೆ ಎಂದು ಆರೋಪಿಸಿದ್ದಾರೆ.