ಬೆಂಗಳೂರು: ಕಾಫಿ ಡೇ ಮಾಲೀಕ ಸಿದ್ಧಾರ್ಥ ನಿಗೂಢವಾಗಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ್ದಾರೆ.
ಎಸ್.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ 'ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ, ಅವರಿಗೆ ಆತ್ಮಸ್ಥೈರ್ಯ ತುಂಬುವ ಪ್ರಯತ್ನ ಮಾಡಿದೆ. ಅವರ ಅಳಿಯ ಸಿದ್ಧಾರ್ಥ್ ನಾಪತ್ತೆಯಾಗಿರುವ ವಿಚಾರ ತಿಳಿದು ಸಂಕಟವಾಯಿತು. ಸಿದ್ಧಾರ್ಥ್ ಅವರು ಸುರಕ್ಷಿತವಾಗಿ ಮರಳಿ ಬರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ ಕೂಡ ಸಿದ್ದರಾಮಯ್ಯ ಜೊತೆಗಿದ್ದ ಕುಟುಂಬದವರಿಗೆ ಸಮಾಧಾನ ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕ್ಷಣಕ್ಷಣಕ್ಕೂ ಘಟನೆಯ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್, ಆರ್.ಅಶೋಕ್, ಎಚ್.ಕೆ.ಪಾಟೀಲ್, ವೀರಪ್ಪ ಮೊಯ್ಲಿ ಸೇರಿದಂತೆ ಎಲ್ಲ ಪಕ್ಷಗಳ ಮುಖಂಡರು,ಗಣ್ಯರು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ್ದಾರೆ.
ಇನ್ನೊಂದೆಡೆ ಸಿದ್ಧಾರ್ಥ್ ನಾಪತ್ತೆಯಾಗಿರುವ ನೇತ್ರಾವತಿ ನದಿ ದಡದಲ್ಲಿ ಶೋಧ ಕಾರ್ಯ ಭರದಿಂದ ಸಾಗಿದೆ. ಎನ್‌ಡಿಆರ್‌ಎಫ್, ಗೃಹ ರಕ್ಷಕದಳ, ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟದಲ್ಲಿ ತೊಡಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ರ ಮಂಗಳೂರು ನಗರದಿಂದ ಉಳ್ಳಾಲ ಕಡೆಗೆ ಹೋಗುವ ಮಾರ್ಗದಲ್ಲಿರುವ ನೇತ್ರಾವತಿ ಸೇತುವೆ ಬಳಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ್ ಅವರು ಸೋಮವಾರ ರಾತ್ರಿ ನಾಪತ್ತೆಯಾಗಿದ್ದಾರೆ.