ಬೆಂಗಳೂರು: ಕೇಂದ್ರ ಬಿಜೆಪಿ ನಾಯಕರ ಆಪರೇಷನ್ ಕಮಲದ ನಿಲುವು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ನಾಳೆ ರಾಜಭವನಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
ಕುಮಾರಕೃಪ ಅತಿಥಿಗೃಹದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಪ್ರಜಾಪ್ರಭುತ್ವ ಉಳಿಸುವ ಸಲುವಾಗಿ ನಾಳೆ ಮಧ್ಯಾಹ್ನ 12 ಗಂಟೆಗೆ ಕಬ್ಬನ್ ಪಾರ್ಕ್ ಸಮೀಪದ ಮಿನ್ ಸ್ಕ್ವೇರ್ ಎದುರು ಪ್ರತಿಭಟನೆ ನಡೆಸಿ, ನಂತರ ರಾಜಭವನಕ್ಕೆ ಮುತ್ತಿಗೆ ಹಾಕಲಿದ್ದೇವೆ. ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು, ಸಾರ್ವಜನಿಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು ಎಲ್ಲ ರಾಜ್ಯ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಲೋಕತಂತ್ರ ಉಳಿಸುವ ಹೋರಾಟದಲ್ಲಿ ಕಾಂಗ್ರೆಸ್ ಜೊತೆ ಜೆಡಿಎಸ್ ಕೂಡ ಸಾಥ್ ನೀಡಲಿದೆ. ರಾಜ್ಯದ ಈ ರಾಜಕೀಯ ಅಸ್ಥಿರತೆಗೆ ರಾಜ್ಯಪಾಲರು ಕೂಡ ಕುಮ್ಮಕ್ಕು ನೀಡುತ್ತಿದ್ದಾರೆ. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಶಾಸಕರನ್ನು ಖರೀದಿ ಮಾಡುವುದು ಹಾಗೂ ಅವರಿಗೆ ಆಸೆ ಆಮಿಷಗಳನ್ನು ಒಡ್ಡುವುದು. ಶಾಸಕರ ವಿರುದ್ಧ ಬ್ಲಾಕ್ಮೇಲ್ ಮಾಡುವ ಕಾರ್ಯ ನಡೆಯುತ್ತಿದೆ. ರಾಜ್ಯಪಾಲರ ಕುಮ್ಮಕ್ಕು ಹಾಗೂ ಬಿಜೆಪಿ ಪಕ್ಷದ ಕಾರ್ಯನಿರ್ವಹಣೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ವಿವರಿಸಿದರು.
ಮುಂಬೈನಿಂದ ಆಗಮಿಸುತ್ತಿರುವ ಕಾಂಗ್ರೆಸ್ ಶಾಸಕರನ್ನು ದಬ್ಬಾಳಿಕೆ ಮೂಲಕ ಕರೆತರುತ್ತಿದ್ದಾರೆಯೇ ಅಥವಾ ಅವರು ಸ್ವಯಂ ಪ್ರೇರಣೆಯಿಂದ ಆಗಮಿಸುತ್ತಿದ್ದಾರೆಯೇ ಎನ್ನುವುದನ್ನು ತನಿಖೆ ಮಾಡಿ ತಿಳಿದುಕೊಳ್ಳಬೇಕಾಗಿದೆ ಎಂದು ಇದೇ ಸಂದರ್ಭ ವಿವರಿಸಿದರು.