ಬೆಂಗಳೂರು: ಉದ್ದೇಶಿತ ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿರುವ ರೈತರಿಗೆ ಪರಿಹಾರ ನೀಡಿದ ನಂತರವೇ ಸಾರ್ವಜನಿಕರಿಗೆ ನಿವೇಶನ ಹಂಚಿಕೆ ಮಾಡಲಾಗುತ್ತದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದರು.ಈ ಉದ್ದೇಶಿತ ಬಡಾವಣೆಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ನಿವೃತ್ತ ಅಧಿಕಾರಿಗಳ ಸಮಿತಿಯನ್ನು ರಚಿಸಿದೆ. ಈ ಸಮಿತಿ ನೀಡುವ ಮಾರ್ಗದರ್ಶನದಡಿಯಲ್ಲಿ ಬಿಡಿಎ ಕಾರ್ಯ ನಿರ್ವಹಣೆ ಮಾಡುತ್ತಿದೆ ಎಂದರು.
ಯಲಹಂಕದ ಬ್ಯಾಟರಾಯನಪುರದಲ್ಲಿ ತಮ್ಮೇಶ್ ಗೌಡ ನೇತೃತ್ವದ ಕೇಸರಿ ಫೌಂಡೇಶನ್ ವತಿಯಿಂದ ಬಡವರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದ್ರು. ಶಿವರಾಮ ಕಾರಂತ ಬಡಾವಣೆಗೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ, ಈ ಹಿಂದೆ ಹಿರಿಯರಾಗಿರುವ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಅವರ ಕಾಲದಲ್ಲಿಯೇ ಈ ಸಮಸ್ಯೆಯನ್ನು ಬಗೆಹರಿಸಬಹುದಾಗಿತ್ತು. ಆದರೆ, ಏಕೆ ಮಾಡಲಿಲ್ಲ? ಸಮಸ್ಯೆಯ ಗಂಭೀರತೆಯ ಬಗ್ಗೆ ಅವರಿಗೆ ಅರಿವಿದೆ. ಆದಾಗ್ಯೂ, ಬಡಾವಣೆ ವಿಳಂಬವಾಗುತ್ತಿರುವುದರ ಬಗ್ಗೆ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದರು.