ಕರ್ನಾಟಕ

karnataka

ETV Bharat / state

1ನೇ ತರಗತಿಗೆ 6 ವರ್ಷ: ಸರ್ಕಾರದ ಅಧಿಸೂಚನೆ ಎತ್ತಿ ಹಿಡಿದ ಹೈಕೋರ್ಟ್ - ಈಟಿವಿ ಭಾರತ್​ ಕನ್ನಡ ನ್ಯೂಸ್

2025-26ನೇ ಸಾಲಿನಲ್ಲಿ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷ ತುಂಬಿರಬೇಕು ಎಂದು 2018ರ ಮೇ 23ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಹೈಕೋರ್ಟ್
ಹೈಕೋರ್ಟ್

By

Published : Aug 9, 2023, 9:35 PM IST

ಬೆಂಗಳೂರು :ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಮೊದಲನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ ಆರು ವರ್ಷ ತುಂಬಿರಬೇಕು ಎಂಬ ಅಧಿಸೂಚನೆಯನ್ನು ರಾಜ್ಯ ಸರ್ಕಾರದ ಹೊರಡಿಸಿದ್ದು, ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದೆ.

2022ರ ಜುಲೈ 26ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು. ನಾಲ್ಕು ವರ್ಷದ ಪುತ್ರಿ ಪ್ರಸಕ್ತ ವರ್ಷದಲ್ಲಿ ಎಲ್​ಕೆಜಿ ಕಲಿಯಲು ಅನುಮತಿಸಬೇಕು ಎಂದು ಕೋರಿ ಬೆಂಗಳೂರಿನ ಅನಿಕೇತ್ (ಮಗುವಿನ ತಂದೆ) ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ನೇತೃತ್ವದ ಏಕಸದಸ್ಯ ಪೀಠ ವಜಾ ಮಾಡಿದೆ.

ರಾಜ್ಯ ಸರ್ಕಾರದ ಅಧಿಸೂಚನೆ ಮತ್ತು ಮಾರ್ಗಸೂಚಿಗಳ ಹಿಂದೆ ಮೇಲ್ನೋಟಕ್ಕೆ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಕೇಂದ್ರಿತ ಉದ್ದೇಶವಿದೆ ಎಂದು ನ್ಯಾಯಾಲಯಕ್ಕೆ ಅರ್ಥವಾಗಿದೆ. ಹೀಗಾಗಿ, ಒಬ್ಬ ವಿದ್ಯಾರ್ಥಿ/ವಿದ್ಯಾರ್ಥಿನಿ ಅದೇ ತರಗತಿಯಲ್ಲಿ ಉಳಿಯಬೇಕಾಗುತ್ತದೆ ಎಂಬ ಕಾರಣಕ್ಕೆ ಮಾರ್ಗಸೂಚಿಯಲ್ಲಿ ಹಸ್ತಕ್ಷೇಪ ಮಾಡಲಾಗದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಜಾಗತಿಕ ಶೈಕ್ಷಣಿಕ ಮಾರ್ಗಸೂಚಿಗಳನ್ನು ಆಧರಿಸಿ ಪ್ರವೇಶಾತಿ ವಯಸ್ಸನ್ನು ಎನ್ಇಪಿ ಮಾನದಂಡಗಳಲ್ಲಿ ಸೇರಿಸಲಾಗಿದೆ. ಮಕ್ಕಳಿಗೆ ಸರಿಯಾದ ಆರೈಕೆ ಮತ್ತು ಶಿಕ್ಷಣ ನೀಡಬೇಕು. ಆಟ ಕೇಂದ್ರಿತ, ಚಟುವಟಿಕೆ ಕೇಂದ್ರಿತ, ಹೊಂದಿಕೊಳ್ಳುವ ಕಲಿಕೆಯ ಭರವಸೆಯ ಹಿನ್ನೆಲೆಯಲ್ಲಿ ತಜ್ಞರು ಹೊಸ ಮಾರ್ಗಸೂಚಿಗಳನ್ನು ರೂಪಿಸಿದ್ದಾರೆ. ಮಕ್ಕಳು ಪ್ರೌಢ ಶಿಕ್ಷಣ ಪಡೆಯುವಾಗ ಅವರಲ್ಲಿ ಪರೀಕ್ಷಾ ಸಂಬಂಧಿ ಒತ್ತಡ ಮತ್ತು ಭಯವನ್ನು ಹೋಗಲಾಡಿಸುವ ಉದ್ದೇಶದಿಂದ ಸಮಗ್ರ ನೀತಿ ರೂಪಿಸಲಾಗಿದೆ ಎಂದು ತಜ್ಞರು ಹೇಳಿರುವಾಗ ಸಕ್ಷಮ ಪ್ರಾಧಿಕಾರ ರೂಪಿಸಿರುವ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಲಾಗದು ಎಂದು ಪೀಠ ಸ್ಪಷ್ಟಪಡಿಸಿದೆ.

ರಾಷ್ಟ್ರೋತ್ಥಾನ ವಿದ್ಯಾಕೇಂದ್ರವು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020 ಅಳವಡಿಸಿಕೊಂಡಿದ್ದು, ಒಂದನೇ ತರಗತಿ ಪ್ರವೇಶಕ್ಕೆ ಕನಿಷ್ಠ ಮತ್ತು ಗರಿಷ್ಠ ಅರ್ಹತಾ ಮಾನದಂಡವನ್ನು ಸರಿಯಾಗಿ ಮಾರ್ಪಾಡು ಮಾಡಿದೆ. ವಿದ್ಯಾಕೇಂದ್ರ ಮತ್ತು ರಾಜ್ಯ ಸರ್ಕಾರವು ಹೊರಡಿಸಿರುವ ಪ್ರವೇಶಾತಿ ಮಾರ್ಗಸೂಚಿಗಳು ಸಿಂಧುವಾಗಿದ್ದು, ಎನ್ಇಪಿಗೆ ಅನುಗುಣವಾಗಿವೆ. ಅಲ್ಲದೆ, ರಾಷ್ಟ್ರೋತ್ಥಾನ ವಿದ್ಯಾಕೇಂದ್ರವನ್ನು ಶಿಕ್ಷಣ ಇಲಾಖೆಯ ಮೂಲಕ ಕೇಂದ್ರ ಸರ್ಕಾರ ನಡೆಸುತ್ತಿದೆ. ಹೀಗಾಗಿ, ವಿದ್ಯಾಕೇಂದ್ರವು ಎನ್ಇಪಿ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಪ್ರಕರಣದ ಹಿನ್ನೆಲೆ :ಬೆಂಗಳೂರಿನ ಥಣಿಸಂದ್ರದಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಅರ್ಜಿದಾರರ ಮಗಳು ಪ್ರಸಕ್ತ ವರ್ಷ ಎಲ್​ಕೆಜಿ ಸೇರ್ಪಡೆ ಮಾಡಿಕೊಳ್ಳುವಂತೆ ಆಕೆಯ ಪೋಷಕರು ಕೋರಿದ್ದರು. ಇದನ್ನು ಮನ್ನಿಸಿ, ಈ ಸಂಬಂಧ ಶಾಲೆಯು ಶುಲ್ಕವನ್ನೂ ವಸೂಲಿ ಮಾಡಿತ್ತು. 2023ರ ಜೂನ್ 1ಕ್ಕೆ ಸರಿಯಾಗಿ ವಿದ್ಯಾರ್ಥಿಗೆ ನಾಲ್ಕು ವರ್ಷ ಪೂರ್ಣಗೊಳಿಸದಿರುವುದರಿಂದ ಆಕೆ ಎಲ್​ಕೆಜಿಗೆ ಪ್ರವೇಶ ಪಡೆಯಲು ಅರ್ಹಳಲ್ಲ ಎಂದು ಶಾಲೆಯು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರ 2018ರ ಮೇ 23ರ ಆದೇಶ ಉಲ್ಲೇಖಿಸಿ 2023ರ ಮೇ 27ರಂದು ಪೋಷಕರಿಗೆ ಶಾಲೆ ಆಡಳಿಯ ಮಂಡಳಿ ಇ-ಮೇಲ್ ಕಳುಹಿಸಿತ್ತು.

ವಿದ್ಯಾರ್ಥಿನಿಯನ್ನು ನರ್ಸರಿಯಲ್ಲೇ ಉಳಿಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿತ್ತು. 2018ರ ಮೇ 23ರ ಆದೇಶದಲ್ಲಿ ರಾಜ್ಯ ಸರ್ಕಾರವು ಒಂದನೇ ತರಗತಿ ಪ್ರವೇಶಕ್ಕೆ 2025-26ನೇ ಸಾಲಿನಲ್ಲಿ ಆರು ವರ್ಷ ತುಂಬಿರಬೇಕು ಎಂದು ಹೇಳಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ :ಸಿಬಿಎಸ್​​​​​​ಸಿ, ಸಿಐಎಸ್‌ಸಿಇ ಪಠ್ಯಕ್ರಮಕ್ಕೆ ಕನ್ನಡ ಕಡ್ಡಾಯ ಕಾನೂನು: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ABOUT THE AUTHOR

...view details