ಬೆಂಗಳೂರು: ನನ್ನ ಜೊತೆಗೆ ಹಲವು ಬಿಜೆಪಿ ನಾಯಕರು ಸಂಪರ್ಕದಲ್ಲಿದ್ದಾರೆ. ಅವರಿಗೆ ನಮ್ಮ ಪಕ್ಷದಲ್ಲಿ ಸೂಕ್ತ ಸ್ಥಾನಮಾನಗಳ ಬಗ್ಗೆ ತೀರ್ಮಾನ ಆಗಬೇಕು. ಆ ನಂತರ ಅವರನ್ನು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಕರೆದುಕೊಂಡು ಬರುವ ಕೆಲಸ ಮಾಡುತ್ತೇನೆ ಎಂದು ಶಾಸಕ ಲಕ್ಷ್ಮಣ್ ಸವದಿ ತಿಳಿಸಿದರು.
ಬಿಜೆಪಿ ಲೀಡರ್ಲೆಸ್ ಪಾರ್ಟಿ: ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ವಿಪಕ್ಷ ನಾಯಕರ ಆಯ್ಕೆ ವಿಳಂಬ ವಿಚಾರವಾಗಿ ಪ್ರತಿಕ್ರಿಯಿಸಿ, ಬಿಜೆಪಿ ಲೀಡರ್ಲೆಸ್ ಪಾರ್ಟಿ ಆಗಿದೆ. ಲೀಡರ್ ಇಲ್ಲದೇ ಇರೋದ್ರಿಂದ ಅಲ್ಲಿರೋರು ಕಾಂಗ್ರೆಸ್ಗೆ ಬರುತ್ತಿದ್ದಾರೆ. ಲೋಕಸಭಾ ಚುನಾವಣೆ ಅಷ್ಟರಲ್ಲಿ ಮತ್ತಷ್ಟು ಜನರು ಕಾಂಗ್ರೆಸ್ಗೆ ಬರ್ತಾರೆ. ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಿಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ. ಇದೀಗ ಅವರು ಹಂಗಾಮಿ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಅಲ್ಲಿ ಹೇಳೋರು, ಕೇಳೋರು ಯಾರೂ ಇಲ್ಲ ಎಂದು ವ್ಯಂಗ್ಯವಾಡಿದರು.
ಬಿಜೆಪಿ - ಜೆಡಿಎಸ್ ವಿಲೀನ ವಿಚಾರ:ಚುನಾವಣೆ ದೃಷ್ಟಿಯಿಂದ ಬಿಜೆಪಿ - ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ ನನಗೆ ಇರುವ ಮಾಹಿತಿ ಪ್ರಕಾರ, ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗುತ್ತದೆ. ವಿಲೀನ ಆದರೆ ಕುಮಾರಸ್ವಾಮಿ ಅವರೇ ವಿರೋಧ ಪಕ್ಷದ ನಾಯಕರಾಗ್ತಾರೆ ಎಂದು ತಿಳಿಸಿದರು. ರಾಜ್ಯಾಧ್ಯಕ್ಷರು ಇಲ್ಲದ ಸಮಯದಲ್ಲಿ ಕುಮಾರಸ್ವಾಮಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಬಹುತೇಕ ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಜೆಡಿಎಸ್ ವಿಲೀನ ಆಗಬಹುದು ಎಂದು ತಿಳಿಸಿದರು.