ಬೆಂಗಳೂರು: ಕೆಲವರು ನಮ್ಮ ಪಕ್ಷವನ್ನು ಲಘುವಾಗಿ ಪರಿಗಣಿಸಿದ್ದು, ಅವರಿಗೆ ಚುನಾವಣೆಯಲ್ಲಿ ಉತ್ತರ ಸಿಗಲಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬರದಿದ್ದರೆ ಪಕ್ಷ ವಿಸರ್ಜನೆ ಮಾಡುತ್ತಾರೆ ಎಂದು ಹೇಳಿಕೊಂಡು ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ತಿರುಗಾಡುತ್ತಿದ್ದಾರೆ. ಅವರಿಗೆ ಏನು ಹೇಳುವುದು? ಸಂಪೂರ್ಣ ಅಧಿಕಾರಕ್ಕೆ ಬಂದು ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದು ಸವಾಲು ಹಾಕಿದ್ದೇನೆ. ಅದು ಕಾಂಗ್ರೆಸ್ ಅಧ್ಯಕ್ಷರಿಗೆ ಸರಿಯಾಗಿ ಅರ್ಥ ಆಗಿಲ್ಲ ಎಂದು ಡಿ ಕೆ ಶಿವಕುಮಾರ್ ಅವರಿಗೆ ಹೆಚ್ ಡಿಕೆ ಟಾಂಗ್ ನೀಡಿದರು.
ಈ ಸಲ ರಾಷ್ಟ್ರೀಯ ಪಕ್ಷಗಳನ್ನು ಜನ ದೂರ ಇಡಲಿದ್ದಾರೆ. ಪಂಚರತ್ನ ಕಾರ್ಯಕ್ರಮ ಸುಮ್ಮನೆ ತೋರ್ಪಡಿಕೆಗೆ ಮಾಡುತ್ತಿಲ್ಲ. ರಾಜ್ಯದ ಮಹಿಳೆಯರ, ಬಡಜನರ ಅವಶ್ಯಕತೆಗೆ ಬೇಕಾದ ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.
ಜೆಡಿಎಸ್ ಪಕ್ಷ ಸೇರ್ಪಡೆ: ವಿಧಾನಸಭೆ ಚುನಾವಣೆಗೆ ಇನ್ನು ಕೆಲ ತಿಂಗಳು ಬಾಕಿ ಇರುವಂತೆಯೇ ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಪ್ರಮುಖರ ಸೇರ್ಪಡೆ ಮುಂದುವರಿದಿದೆ. ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಲ್. ಘೋಟ್ನೇಕರ್ ಹಾಗೂ ಕೋಲಾರದ ಮಾಜಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ಮತ್ತು ಕೋಚಿಮುಲ್ ನಿರ್ದೇಶಕ ವಡಗೂರು ಹರೀಶ್‍ಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ವೀರಭದ್ರಪ್ಪ ಹಾಲರವಿ ಅವರು ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದರೆ, ಎಸ್.ಎಲ್. ಘೋಟ್ನೇಕರ್ ಮತ್ತು ವಡಗೂರು ಹರೀಶ್‍ಗೌಡ ಅವರು ಕಾಂಗ್ರೆಸ್ ಪಕ್ಷ ತೊರೆದು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಸೇರ್ಪಡೆಯಾದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು, ಸಿಎಂ ಇಬ್ರಾಹಿಂ ಅವರು ಈ ಮೂವರು ಮುಖಂಡರಿಗೆ ಪಕ್ಷದ ಧ್ವಜ ನೀಡಿ, ಜೆಡಿಎಸ್ ಶಾಲು ಹೊದಿಸಿ ಬರ ಮಾಡಿಕೊಂಡರು.