ಬೆಂಗಳೂರು:''ಪಶುಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು'' ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ವಿಧಾನಸಭೆಯಲ್ಲಿ ಸೋಮವಾರ ಭರವಸೆ ನೀಡಿದರು.
ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಪ್ರಶ್ನೆಗೆ ಉತ್ತರಿಸಿದ ಸಚಿವರು, ''ಎರಡು ತಿಂಗಳಲ್ಲಿ 200 ಪಶು ಪರೀಕ್ಷಕರನ್ನು ಹಾಗೂ ಡಿಸೆಂಬರ್ ಅಂತ್ಯದೊಳಗೆ 400 ಪಶು ವೈದ್ಯರನ್ನು ನೇಮಕ ಮಾಡಲಾಗುವುದು'' ಎಂದು ತಿಳಿಸಿದರು. ''ಪಶು ಚಿಕಿತ್ಸಾಲಯಗಳಲ್ಲಿ ಹೆಚ್ಚುವರಿಯಾಗಿರುವ ಪಶುವೈದ್ಯರನ್ನು ಅಗತ್ಯವಿರುವ ಕಡೆ ವರ್ಗಾವಣೆ ಮಾಡಲಾಗುವುದು. ಸಿಬ್ಬಂದಿ ನೇಮಕ ಸಂಬಂಧ ಈಗಾಗಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅನುಮತಿ ದೊರೆತ ಕೊಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು'' ಎಂದರು.
''ಐದು ಸಾವಿರ ಜಾನುವಾರುಗಳಿಗೆ ಒಬ್ಬ ಪಶುವೈದ್ಯರು ಇರಬೇಕೆಂಬ ನಿಯಮವಿದೆ. ಜಾನುವಾರುಗಳ ಸಂಖ್ಯಾನುಸಾರ ಸಿಬ್ಬಂದಿ ನೇಮಕಕ್ಕೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು'' ಎಂದು ಹೇಳಿದರು. ಈ ಮಧ್ಯೆ ಪ್ರವೇಶಿಸಿದ ಸಭಾಧ್ಯಕ್ಷ ಯು.ಟಿ. ಖಾದರ್ ಅವರು, ''ಮೂಕ ಪ್ರಾಣಿಗಳ ಜೀವ ರಕ್ಷಣೆಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳಬೇಕು. ಖಾಸಗಿ ವೈದ್ಯಕೀಯ ಕಾಲೇಜುಗಳ ಮಾದರಿಯಲ್ಲಿ ಖಾಸಗಿ ಪಶುವೈದ್ಯಕೀಯ ಕಾಲೇಜುಗಳನ್ನು ತೆರೆಯುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು'' ಎಂದು ಸಲಹೆ ನೀಡಿದರು.
ಪಶುಚಿಕಿತ್ಸಾ ಕೇಂದ್ರ ಸ್ಥಾಪನೆ:ರಾಜ್ಯದಲ್ಲಿ ಹೊಸದಾಗಿ 100 ಪಶುಚಿಕಿತ್ಸಾ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿದ್ದು, ಮೊದಲ ಹಂತದಲ್ಲಿ 20 ಕೇಂದ್ರಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. 30 ಪಶು ಚಿಕಿತ್ಸಾಲಯಗಳನ್ನು ತೆರೆಯುವ ಸಂಬಂಧ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಂಜೂರಾದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೆ. ವೆಂಕಟೇಶ್ ಅವರು, ಜೆಡಿಎಸ್ ಸದಸ್ಯ ವೆಂಕಟಶಿವಾರೆಡ್ಡಿ ಅವರ ಪ್ರಶ್ನೆಗೆ ಉತ್ತರಿಸಿದರು.